ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಹೈಡ್ರಾಮಾ ಅಂತಿಮ ಘಟ್ಟ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ಫಿಕ್ಸ್ ಆಗಿದ್ದು, ನಾಳೆ (ಗುರುವಾರ) ಬೆಳಗ್ಗೆ 10:30ಕ್ಕೆ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಲು ಸಿಎಂ ಅಧಿಕೃತವಾಗಿ ಸಮಯ ಕೇಳಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜತೆ ನಡೆದ ಮ್ಯಾರಾಥಾನ್ ಸಭೆಗಳ ಬೆನ್ನಲ್ಲೇ ಸಿದ್ದರಾಮಯ್ಯ ತಮ್ಮ ಸ್ಥಾನದಿಂದ ಕೆಳಗಿಳಿಯಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಅಧಿಕೃತ ರಾಜೀನಾಮೆ ಪತ್ರವನ್ನು ಸಲ್ಲಿಕೆ
ನಾಳೆ ಬೆಳಗ್ಗೆ 10:30ಕ್ಕೆ ರಾಜ್ಯಪಾಲರನ್ನು ಭೇಟಿಯಾಗಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕೃತ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ. ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ ಸೂತ್ರದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಇದ್ದ ಸುದೀರ್ಘ ಬಿಕ್ಕಟ್ಟಿಗೆ ಹೈಕಮಾಂಡ್ ಮಧ್ಯಪ್ರವೇಶದ ನಂತರ ಕೊನೆಗೂ ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ.
ಮುಖ್ಯಮಂತ್ರಿಗಳ ರಾಜೀನಾಮೆ ಸಲ್ಲಿಕೆಯಾದ ಮರುದಿನವೇ (ಮೇ 29) ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಜಂಟಿ ಸಭೆಯನ್ನು ಕರೆಯಲಾಗಿದ್ದು, ಹೈಕಮಾಂಡ್ ವೀಕ್ಷಕರ ಸಮ್ಮುಖದಲ್ಲಿ ಹೊಸ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಹೊಸ ಸಾರಥಿ ಯಾರು?
ಮುಖ್ಯಮಂತ್ರಿ ರೇಸ್ನಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರು ಅತ್ಯಂತ ಮುಂಚೂಣಿಯಲ್ಲಿದೆ. ಹೈಕಮಾಂಡ್ ರಾಜ್ಯದಲ್ಲಿ ಸಂಪೂರ್ಣ ಹೊಸ ಇಮೇಜ್ ಸೃಷ್ಟಿಸಲು ಮುಂದಾದರೆ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೆಸರುಗಳೂ ಮುಂಚೂಣಿಗೆ ಬರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.



