May 28, 2026
Thursday, May 28, 2026
spot_img

ಹೈಕಮಾಂಡ್ ಸೂಚನೆಯಂತೆ ಸಿಎಂ ಹುದ್ದೆ ತ್ಯಜಿಸಿದ್ದೇನೆ: ರಾಜೀನಾಮೆ ಬಳಿಕ ಸಿದ್ದರಾಮಯ್ಯ ಮಾತು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಂದಿನಿಂದಲೂ ನಾನು ಒಂದೇ ಮಾತು ಹೇಳುತ್ತಿದೆ. ಹೈಕಮಾಂಡ್‌ ಏನು ಹೇಳುತ್ತೋ ಅದಕ್ಕೆ ಬದ್ಧ ಎಂದು. ಅದರಂತೆ ಇಂದು ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದೆ

ರಾಜೀನಾಮೆ ಬಳಿಕ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಸೂಚನೆಯಂತೆ ಇಂದು ನಾನು ಸಿಎಂ ಹುದ್ದೆಯನ್ನು ತ್ಯಜಿಸಿದ್ದೇನೆ. ಮೊದಲಿನಿಂದಲೂ ಒಂದು ಮಾತನ್ನುಹೇಳುತ್ತಾ ಬಂದಿದ್ದೆ. ಕಾಂಗ್ರೆಸ್ ಹೈಕಮಾಂಡ್ ನನಗೆ ಯಾವಾಗ ಸೂಚನೆ ನೀಡುತ್ತಾರೋ, ಆ ತಕ್ಷಣವೇ ನಾನು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದೆ. ಮೊನ್ನೆ ನನಗೆ ರಾಜೀನಾಮೆ ನೀಡಿ ಎಂಬ ಸಂದೇಶ ಬಂದಿತ್ತು. ಇಂದು ರಾಜೀನಾಮೆ ನೀಡುವುದಾಗಿ ತಿಳಿಸಿದ್ದೆ, ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಹೇಳಿದರು.

ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ

ನನಗೆ ಎರಡು ಬಾರಿ ಸಿಎಂ ಆಗುವ ಅವಕಾಶ ಸಿಕ್ಕಿತ್ತು. ಕನ್ನಡ‌ ನಾಡಿನ ಏಳು ಕೋಟಿ ಜನರ ಸೇವೆ ಮಾಡಿದ್ದೇನೆ. ಈ ಅವಕಾಶ ಕೊಟ್ಟ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ, ನಮ್ಮ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಕನಸು ನನಸಾಗಿದೆ

ರೈತಾಪಿ ಕುಟುಂಬದಿಂದ ಬಂದ ನಾನು ರಾಜಕಾರಣಕ್ಕೆ ಪ್ರವೇಶ ಮಾಡುವಾಗ ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸನ್ನೂ ಕಂಡವನಲ್ಲ. ಇಂತಹ ಕನಸನ್ನು ನನಸು ಮಾಡಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ಈ ಸಂವಿಧಾನದ ಬಲ ಇಲ್ಲದೆ ಹೋಗಿದ್ದರೆ ನಾನು ಎಲ್ಲೋ ಕುರಿ ಮೇಯಿಸಿಕೊಂಡೋ, ಇನ್ನೇನೋ ಆಗಿ ಇರುತ್ತಿದ್ದೆ. ಈ ಕಾರಣಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ತಲೆಬಾಗಿ ನಮಿಸುತ್ತೇನೆ ಎಂದು ತಿಳಿಸಿದರು.

ಈ ಸಾಧನೆಗೆ ಹಲವು ಜನರ ಮಾರ್ಗದರ್ಶನ

77 ವರ್ಷಗಳ ಜೀವನ ಪಯಣದಲ್ಲಿ ನನ್ನ ಬದುಕು ಒಂದು ತೆರೆದ ಪುಸ್ತಕ. ಹಲವಾರು ವ್ಯಕ್ತಿಗಳು ಪ್ರೀತಿ-ವಿಶ್ವಾಸದಿಂದ ಕೈಹಿಡಿದು ಮುನ್ನಡೆಸಿದ್ದಾರೆ. ಈ ಪುಸ್ತಕದಲ್ಲಿ ಮೊದಲ ಬರವಣಿಗೆ ಮಾಡಿದ್ದು ಮರಳಿನ ಮೇಲಿನ ಅಕ್ಷರಾಭ್ಯಾಸದ ಮೂಲಕ ವೀರ ಕುಣಿತವನ್ನು ಕಲಿಯುತ್ತಾ ಸಮಯ ಸಿಕ್ಕಾಗ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತಿದ್ದ ನನ್ನನ್ನು ಶಾಲೆಗೆ ಕರೆದೊಯ್ದು ವಿದ್ಯೆ ಕಲಿಯುವ ಅವಕಾಶ ನೀಡಿದವರು ರಾಜಪ್ಪ ಮಾಸ್ತರ್ ಅವರು. ವಕೀಲನಾಗಿದ್ದ ನನ್ನಲ್ಲಿನ ಸೇವಾಕಾಂಕ್ಷೆಯನ್ನು ಗುರುತಿಸಿಸಿ ಸಮಾಜವಾದದ ಪಾಠ ಮಾಡಿ, ರಾಜಕಾರಣಿಗಳಿಗೆ ಇರಬೇಕಾದ ಸೈದ್ದಾಂತಿಕ ಬದ್ದತೆ, ಕಾಳಜಿ ಮತ್ತು ಹೋರಾಟದ ಗುಣವನ್ನು ಕಲಿಸಿದವರು ರೈತನಾಯಕ ಎಂ.ಡಿ.ನಂಜುಂಡಸ್ವಾಮಿ. ಬಳಿಕ 1983ರಲ್ಲಿ ದಿವಂಗತ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನನ್ನನ್ನು ಗುರುತಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಲ್ಲದೆ ಎರಡನೇ ಬಾರಿ ಶಾಸಕನಾದ ನನ್ನನ್ನು ಸಚಿವನನ್ನಾಗಿ ಮಾಡಿದರು. ಇವರೆಲ್ಲರ ನೆರವು, ಕಾಳಜಿ ಮತ್ತು ಮಾರ್ಗದರ್ಶನಗಳು ಇಲ್ಲದೆ ಹೋಗಿದ್ದರೆ ನಾನು ಇಷ್ಟು ದೂರ ಸಾಗಿ ಬರುತ್ತಿರಲಿಲ್ಲ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !