ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರವಾಸಕ್ಕೆ ತೆರಳಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 8 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಜಿಲ್ಲೆಯ ಚುರಾಹ್ ಉಪವಿಭಾಗದ ಬೈರಗಢ್–ಸಚ್ ಪಾಸ್–ಕಿಲ್ಲರ್ ಮಾರ್ಗದಲ್ಲಿ ಈ ದುರ್ಘಟನೆ ನಡೆದಿದೆ. ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಸುಮಾರು 500 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.
ಬೆಂಗಳೂರಿನ ಪ್ರವಾಸಿ ಕುಟುಂಬಕ್ಕೆ ಎದುರಾದ ಕಂಟಕ:
ಪ್ರಾಥಮಿಕ ವರದಿಗಳ ಪ್ರಕಾರ, ಮೃತಪಟ್ಟವರಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಬಂದಿದ್ದ ಪ್ರವಾಸಿಗರು ಸೇರಿದ್ದಾರೆ. ಈ ಕುಟುಂಬವು ಡಲ್ಹೌಸಿ ಪ್ರವಾಸಕ್ಕಾಗಿ ಟ್ಯಾಕ್ಸಿಯೊಂದನ್ನು ಬಾಡಿಗೆಗೆ ಪಡೆದುಕೊಂಡಿತ್ತು. ಡಲ್ಹೌಸಿಯಲ್ಲಿ ತಂಗಿದ್ದ ಮತ್ತೊಂದು ಪ್ರವಾಸಿ ಕುಟುಂಬದ ಜೊತೆಗೆ ವಾಹನವನ್ನು ಹಂಚಿಕೊಂಡು, ಹಿಮದಿಂದ ಆವೃತವಾಗಿರುವ ಪ್ರಸಿದ್ಧ ಪ್ರವಾಸಿ ತಾಣ ‘ಸಚ್ ಪಾಸ್’ ವೀಕ್ಷಣೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೊಳಗಾದ ವಾಹನದಲ್ಲಿ ಚಾಲಕ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಒಂಬತ್ತು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ದಟ್ಟ ಕಂದಕ: ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ:
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆ ನಡೆದ ಸ್ಥಳವು ಅತ್ಯಂತ ದುರ್ಗಮ ಮತ್ತು ಕಡಿದಾದ ಇಳಿಜಾರುಗಳಿಂದ ಕೂಡಿದ್ದರಿಂದ, ಮೃತದೇಹಗಳನ್ನು ಹೊರತೆಗೆಯಲು ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಲು ರಕ್ಷಣಾ ಸಿಬ್ಬಂದಿ ತೀವ್ರ ತೊಂದರೆ ಎದುರಿಸಬೇಕಾಯಿತು.
ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಹಾಗೂ ಸ್ಥಳೀಯ ಆಡಳಿತಾಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದು, ಅಪಘಾತಕ್ಕೆ ನಿಖರ ಕಾರಣ ಏನೆಂಬುದರ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಚಂಬಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಸಕ್ಲಾನಿ ಅವರು ಅಪಘಾತವನ್ನು ದೃಢಪಡಿಸಿದ್ದು, ತಕ್ಷಣವೇ ರಕ್ಷಣಾ ತಂಡವನ್ನು ಸ್ಥಳಕ್ಕೆ ರವಾನಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.



