June 3, 2026
Wednesday, June 3, 2026
spot_img

ದಿಲ್ಲಿ ರೆಸ್ಟೋರೆಂಟ್‌ನಲ್ಲಿ ಭೀಕರ ಅಗ್ನಿ ದುರಂತ: 21 ಮಂದಿ ಸಾ*ವು, 37 ಜನ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಿಲ್ಲಿಯಲ್ಲಿ ಇಂದು ಬೆಳಗ್ಗೆ ಅತ್ಯಂತ ದುರದೃಷ್ಟಕರ ಘಟನೆಯೊಂದು ಸಂಭವಿಸಿದೆ. ದಕ್ಷಿಣ ದಿಲ್ಲಿಯ ಪ್ರಸಿದ್ಧ ಮಾಳ್ವಿಯಾ ನಗರದಲ್ಲಿರುವ ಆರು ಅಂತಸ್ತಿನ ಕಟ್ಟಡದ ರೆಸ್ಟೋರೆಂಟ್‌ ಒಂದರಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ವಿದೇಶಿ ಪ್ರಜೆಗಳು ಸೇರಿದಂತೆ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬೆಳಿಗ್ಗೆ 8:50ಕ್ಕೆ ಸಂಭವಿಸಿದ ದುರಂತ

ಸ್ಥಳೀಯರ ಮಾಹಿತಿ ಪ್ರಕಾರ, ಇಂದು ಬೆಳಿಗ್ಗೆ ಸುಮಾರು 8:50ರ ಸುಮಾರಿಗೆ ಈ ಆರು ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಜ್ವಾಲೆಯು ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ತಕ್ಷಣವೇ ಎಚ್ಚೆತ್ತ ಸಾರ್ವಜನಿಕರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳಕ್ಕೆ ಧಾವಿಸಿರುವ 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ.

21 ಮಂದಿ ಸಾವು; ವಿದೇಶಿಗರೇ ಹೆಚ್ಚು?

ಈ ಭೀಕರ ದುರಂತದಲ್ಲಿ ಇದುವರೆಗೆ 21 ಜನರು ಉಸಿರುಗಟ್ಟಿ ಹಾಗೂ ಸಜೀವ ದಹನವಾಗಿ ಮೃತಪಟ್ಟಿದ್ದಾರೆ. ಮೃತರ ಪೈಕಿ ಹಲವರು ಮಧ್ಯ ಏಷ್ಯಾ ಮತ್ತು ಆಫ್ರಿಕಾ ಖಂಡದ ವಿದೇಶಿ ಪ್ರಜೆಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿ ಕಟ್ಟಡದಲ್ಲಿದ್ದ 37 ಜನರನ್ನು ಯಶಸ್ವಿಯಾಗಿ ರಕ್ಷಿಸಿದ್ದಾರೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.

ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

ಈ ದಾರುಣ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಕಳವಳ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಈ ಕುರಿತು ಪ್ರಧಾನಿ ಕಚೇರಿ ತನ್ನ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, “ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಅಮಾಯಕರು ಮೃತಪಟ್ಟಿರುವುದು ಅತ್ಯಂತ ದುಃಖದ ಸಂಗತಿ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ನೆರವು ನೀಡಲು ಅಧಿಕಾರಿಗಳು ಸ್ಥಳದಲ್ಲಿ ಸಕ್ರಿಯರಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಪ್ರಸ್ತುತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಏನೆಂಬುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !