ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದ ಮೂಲಕ ರಾಜ್ಯದ ಜನತೆಗೆ ಮತ್ತು ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ್ದಾರೆ. “ಜನರಿಂದ, ಜನರಿಗಾಗಿ, ಜನರಿಗೋಸ್ಕರ” ಎಂಬ ಧ್ಯೇಯವಾಕ್ಯದೊಂದಿಗೆ ಪೋಸ್ಟ್ ಆರಂಭಿಸಿರುವ ಅವರು, ತಮ್ಮ ಹೊಸ ಆಡಳಿತದ ದೃಷ್ಟಿಕೋನವನ್ನು ಬಿಚ್ಚಿಟ್ಟಿದ್ದಾರೆ.
ಕನ್ನಡಿಗರ ಪ್ರೀತಿಗೆ ತಲೆಬಾಗಿದ ಸಿಎಂ:
ನನ್ನ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲೂ ಧೈರ್ಯ ತುಂಬಿ, ನನ್ನನ್ನು ಹೆಗಲ ಮೇಲೆ ಹೊತ್ತು ಮುನ್ನಡೆಸಿದ ನನ್ನ ಪ್ರೀತಿಯ ಕರ್ನಾಟಕದ ಕೋಟ್ಯಂತರ ಜನತೆ ಹಾಗೂ ಕಾರ್ಯಕರ್ತ ಬಂಧುಗಳ ಆಶೀರ್ವಾದದಿಂದ ಇಂದು ಪ್ರಮಾಣವಚನ ಸ್ವೀಕರಿಸಿದೆ. ನಿಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸಕ್ಕೆ ತಲೆಬಾಗುತ್ತೇನೆ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.
ಕನಸುಗಳನ್ನು ನನಸು ಮಾಡುವ ಪವಿತ್ರ ಕರ್ತವ್ಯ:
ಇಂದು ತಮ್ಮ ಹೆಗಲ ಮೇಲಿರುವುದು ಕೇವಲ ಮುಖ್ಯಮಂತ್ರಿಯ ಜವಾಬ್ದಾರಿಯಲ್ಲ, ಬದಲಿಗೆ ಕೋಟ್ಯಂತರ ಕನ್ನಡಿಗರ ಕನಸುಗಳನ್ನು ನನಸು ಮಾಡುವ ಪವಿತ್ರ ಕರ್ತವ್ಯ ಎಂದು ಅವರು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.
ತಂತ್ರಜ್ಞಾನದ ಯುಗದಲ್ಲಿ ನವ ಕರ್ನಾಟಕ:
ವೇಗವಾಗಿ ಬದಲಾಗುತ್ತಿರುವ ಇಂದಿನ ತಂತ್ರಜ್ಞಾನದ ಯುಗದಲ್ಲಿ, ಹೊಸ ಆಲೋಚನೆಗಳೊಂದಿಗೆ ಹೆಮ್ಮೆಯ ಕರ್ನಾಟಕವನ್ನು ಅಭಿವೃದ್ಧಿಯ ಅತ್ಯುನ್ನತ ಶಿಖರಕ್ಕೆ ಕೊಂಡೊಯ್ಯಬೇಕಿದೆ. ಈ ಸರ್ವತೋಮುಖ ಪ್ರಗತಿಯ ದಾರಿಯಲ್ಲಿ ರೈತರು, ಶ್ರಮಿಕರು, ಮಹಿಳೆಯರು, ವಿದ್ಯಾರ್ಥಿಗಳು ಮತ್ತು ಯುವಜನರ ಸಹಭಾಗಿತ್ವ ಮುಖ್ಯ ಎಂದು ಹೇಳಿದ್ದಾರೆ.
ಸಮೃದ್ಧ ಕರ್ನಾಟಕ ಕಟ್ಟಲು ಕರೆ:
ಯಾವುದೇ ಒಬ್ಬ ವ್ಯಕ್ತಿಯಿಂದ ಬದಲಾವಣೆ ಸಾಧ್ಯವಿಲ್ಲ, ಆದರೆ ನಾವೆಲ್ಲರೂ ಕೈಜೋಡಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಬನ್ನಿ, ನಮ್ಮ ಭವಿಷ್ಯದ ಪೀಳಿಗೆ ಹೆಮ್ಮೆ ಪಡುವಂತಹ ಸುಂದರ, ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕವನ್ನು ಕಟ್ಟೋಣ ಎಂದು ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.



