ಹೊಸ ದಿಗಂತ ವರದಿ, ಕಲಬುರಗಿ:
ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಎಎಸ್ಐ ಶಿವಶರಣಪ್ಪ ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿ ಜ್ಯೋತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಆರೋಪಿಗಳಿಂದ ಹಣಕ್ಕೆ ಬೇಡಿಕೆ ಇಟ್ಟ ಪೊಲೀಸರು
ಚಿಂದಿ ಆಯುವ ಮಹಿಳೆಯ ಮಗಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣದ ಚಾರ್ಜ್ಶೀಟ್ ಸಲ್ಲಿಕೆ ಪ್ರಕ್ರಿಯೆ ವೇಳೆ ಪ್ರಕರಣ ನಿಮ್ಮ ಪರವಾಗಿ ಆಗುವಂತೆ ನೋಡಿಕೊಳ್ಳುತ್ತೇವೆ ಎಂದು ಆರೋಪಿಗಳಿಂದ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ.
ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ ಕಾರ್ಯಾಚರಣೆ ನಡೆಸಿದ್ದು,ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಎಎಸ್ಐ ಶಿವಶರಣಪ್ಪ ಹಾಗೂ ಪೊಲೀಸ್ ಸಿಬ್ಬಂದಿ ಜ್ಯೋತಿಯನ್ನು ರೆಡ್ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಇನ್ಸ್ಪೆಕ್ಟರ್ ಅರುಣ ಮುರಗುಂಡಿ ನೇತೃತ್ವದ ತಂಡ ದಾಳಿ ನಡೆಸಿ ಕಾರ್ಯಾಚರಣೆ ಯಶಸ್ವಿಗೊಳಿಸಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.
ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಅವರ ಸ್ವಜಿಲ್ಲೆಯಲ್ಲೇ ಈ ಘಟನೆ ಬೆಳಕಿಗೆ ಬಂದಿರುವುದು ಗಮನಾರ್ಹವಾಗಿದೆ.



