ಹೊಸದಿಗಂತ ವರದಿ ಬೆಳಗಾವಿ:
ಸೋಮವಾರ ಸುರಿದ ಧಾರಾಕಾರ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಗೊಳಗಾದ ವ್ಯಾಪಾರಸ್ಥರು, ಅಂಗಡಿಕಾರರು ಹಾಗೂ ನೆರೆ ಸಂತ್ರಸ್ತರು ಮಂಗಳವಾರ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಅಕಾಲಿಕ ಮಳೆಯಿಂದ ಹಾನಿಗೊಳಗಾಗುವುದಕ್ಕೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಸರ್ಕಾರದಿಂದ ತಕ್ಷಣ ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ ನೇತೃತ್ವದಲ್ಲಿ ಸಂತ್ರಸ್ತರು ಸಭೆ ನಡೆಸಿ, ಬಳಿಕ ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನಾ ಮೆರವಣಿಗೆ ಮೂಲಕ ನಗರಸಭೆಗೆ ತೆರಳಿದರು. ಈ ವೇಳೆ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಒಕ್ಕೂಟದ ನೇತೃತ್ವದಲ್ಲಿ ಇಂಚಲ ಕ್ರಾಸ್ ಮುಖ್ಯ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಹಾಗೂ ವ್ಯಾಪಾರಸ್ಥರಿಗೆ ತಕ್ಷಣ ನೆರವು ಒದಗಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಇದನ್ನೂ ಓದಿ:
ಮಳೆಯಿಂದ ಭಾರೀ ನಷ್ಟ
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶಂಕರ ಮಾಡಲಗಿ ಹಾಗೂ ರೈತ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ದೇಶನೂರ, ಭಾರಿ ಮಳೆಯಿಂದ ಅನೇಕ ಮನೆಗಳಿಗೆ ನೀರು ನುಗ್ಗಿ ಗೃಹೋಪಯೋಗಿ ವಸ್ತುಗಳು ಹಾಳಾಗಿವೆ. ಅಂಗಡಿಗಳಿಗೆ ನೀರು ನುಗ್ಗಿ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ ಎಂದು ಹೇಳಿದರು.
ಮನೆಗಳು ಕುಸಿದಿರುವ ಕಾರಣ ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ನೆರೆ ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಬೇಕು. ಆಹಾರದ ಸಮಸ್ಯೆ ಎದುರಿಸುತ್ತಿರುವ ಕುಟುಂಬಗಳಿಗಾಗಿ ಗಂಜಿ ಕೇಂದ್ರಗಳನ್ನು ಆರಂಭಿಸಿ ಊಟದ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.
ಪರಿಹಾರ ಬಿಡುಗಡೆಗೆ ಮನವಿ
ಹಾನಿಗೊಳಗಾದ ಮನೆಗಳು, ಅಂಗಡಿಗಳು, ವಾಹನಗಳು ಹಾಗೂ ಕೃಷಿ ಬೆಳೆಗಳ ಸಮಗ್ರ ಸಮೀಕ್ಷೆ ನಡೆಸಿ ಸರ್ಕಾರದಿಂದ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು. ಜೊತೆಗೆ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಅಗತ್ಯ ವೈದ್ಯಕೀಯ ನೆರವು ಒದಗಿಸುವಂತೆ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಉಪಾಧ್ಯಕ್ಷ ಈರಣ್ಣ ಅಂಗಡಿ, ಕಾರ್ಯಾಧ್ಯಕ್ಷ ಬಸನಗೌಡ ಪಾಟೀಲ, ಮುಖಂಡರಾದ ರುದ್ರಪ್ಪ ಕೊಡ್ಲಿ, ಸಂಜೀವಕುಮಾರ ತಿಲಗರ, ಮಲ್ಲಪ್ಪ ಭಂಗಿ, ಬಸವರಾಜ ಉಪ್ಪಾರ ಸೇರಿದಂತೆ ವ್ಯಾಪಾರಸ್ಥರು, ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.



