June 14, 2026
Sunday, June 14, 2026
spot_img

ಪೋಕ್ಸೋ ಪ್ರಕರಣದಲ್ಲಿ ಲಂಚ? ಎಎಸ್‌ಐ, ಮಹಿಳಾ ಹೆಡ್ ಕಾನ್ಸ್‌ಟೇಬಲ್ ಅಮಾನತು

ಹೊಸದಿಗಂತ ವರದಿ ಕಲಬುರಗಿ:

ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ಹೇಳಿ ಲಂಚದ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಎಎಸ್‌ಐ ಹಾಗೂ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಅವರನ್ನು ಅಮಾನತುಗೊಳಿಸಿ ನಗರ ಪೋಲಿಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಆದೇಶ ಹೊರಡಿಸಿದ್ದಾರೆ.

ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಗುನ್ನೆ ಸಂಖ್ಯೆ 61/2026ರಲ್ಲಿ ಬಿಎನ್‌ಎಸ್ ಕಲಂ 64(2)(ಎಂ) ಹಾಗೂ ಪೋಕ್ಸೋ ಕಾಯ್ದೆಯ ಕಲಂ 4 ಮತ್ತು 6ರಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಹೇಳಿಕೆ ಪಡೆದುಕೊಳ್ಳುವ ವಿಚಾರದಲ್ಲಿ ತನಿಖಾ ಸಹಾಯಕ ಸಿಬ್ಬಂದಿಯಾಗಿದ್ದ ಶ್ರೀಮತಿ ಜ್ಯೋತಿ (ಮಹಿಳಾ ಹೆಡ್ ಕಾನ್ಸ್‌ಟೇಬಲ್) ಹಾಗೂ ಶಿವಶರಣಪ್ಪ (ಎಎಸ್‌ಐ) ಅವರು ದೂರುದಾರರನ್ನು ಠಾಣೆಗೆ ಕರೆಯಿಸಿಕೊಂಡು ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ಹೇಳಿ ₹10,000 ಲಂಚದ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ, ಜೂನ್ 7ರಂದು ಬೆಳಿಗ್ಗೆ 11.30 ಗಂಟೆ ಸುಮಾರಿಗೆ ದೂರುದಾರರಿಂದ ₹9,000 ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ಬಲೆಗೆ ಬೀಳಿಸಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ಸಹಾಯ ಮಾಡುವ ನೆಪದಲ್ಲಿ ಹಣದ ಬೇಡಿಕೆ ಇಟ್ಟಿರುವುದು, ಕರ್ತವ್ಯ ನಿರ್ವಹಣೆಯಲ್ಲಿ ಗಂಭೀರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ತೋರಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತಿನ ನಡಾವಳಿ) ನಿಯಮಾವಳಿ 1965/1989ರ ನಿಯಮ 5ರ ಅನ್ವಯ ಇಲಾಖಾ ಶಿಸ್ತು ಕ್ರಮ ಬಾಕಿ ಇರಿಸಿ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಈ ಘಟನೆ ಪೊಲೀಸ್ ಇಲಾಖೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಸಾರ್ವಜನಿಕ ವಲಯದಲ್ಲೂ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !