June 10, 2026
Wednesday, June 10, 2026
spot_img

ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ: ಮುಂದಿನ ಐದು ದಿನ ಭಾರೀ ಮಳೆಯ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗುವ ಲಕ್ಷಣಗಳು ಕಂಡುಬಂದಿವೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಜೂನ್ 10ರಿಂದ ಜೂನ್ 14ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಹಾಗೂ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿಯೂ ಬೀಸುವ ನಿರೀಕ್ಷೆಯಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್

ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಈ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವ್ಯಾಪಕ ಮಳೆಯ ಪರಿಣಾಮ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದ್ದು, ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನ ಹವಾಮಾನ ಹೇಗಿರಲಿದೆ?

ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ತಂಪಾದ ಗಾಳಿ ನಗರವಾಸಿಗಳಿಗೆ ಸ್ವಲ್ಪ ನಿರಾಳತೆ ನೀಡಲಿದೆ. ಗಾಳಿಯ ವೇಗವು 30ರಿಂದ 40 ಕಿ.ಮೀ.ವರೆಗೆ ಇರಬಹುದು. ಗರಿಷ್ಠ ತಾಪಮಾನ ಸುಮಾರು 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಸುತ್ತಮುತ್ತ ದಾಖಲಾಗುವ ಸಾಧ್ಯತೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !