ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಅದೇ ರೀತಿ ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಬಹುದು ಎಂದು ತಿಳಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಆಗಲಿದೆ.
ಇದೇ ರೀತಿಯಲ್ಲಿ ಮಂಡ್ಯ, ಹಾಸನ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಉಡುಪಿ, ಕಾರವಾರ, ಚಿಕ್ಕಮಗಳೂರು, ದಾವಣಗೆರೆ ಹಾಗೂ ಹುಬ್ಬಳ್ಳಿಯಂತಹ ನಗರಗಳಲ್ಲಿಯೂ ಸಹ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.