June 11, 2026
Thursday, June 11, 2026
spot_img

ಮಂಡ್ಯ ಜಿಲ್ಲೆಯ 4 ತಾಲೂಕುಗಳಲ್ಲಿ ತಲಾ 16 ಲಕ್ಷ ರೂ. ವೆಚ್ಚದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಸಿದ್ಧತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:


ಸ್ವಚ್ಛ ಭಾರತ ಮಿಷನ್ ಯೋಜನೆಯ ಎರಡನೇ ಹಂತದ ಮಾರ್ಗಸೂಚಿಗಳ ಅನ್ವಯ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಲಾಗಿದ್ದು, ಮಂಡ್ಯ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ತಲಾ ₹16 ಲಕ್ಷ ವೆಚ್ಚದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿನಿ ತಿಳಿಸಿದ್ದಾರೆ.


ಮಂಡ್ಯ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮ ಪಂಚಾಯಿತಿ, ನಾಗಮಂಗಲ ತಾಲೂಕಿನ ಹುಲಿಕೆರೆ ಗ್ರಾಮ ಪಂಚಾಯಿತಿ, ಕೆ.ಆರ್. ಪೇಟೆ ತಾಲೂಕಿನ ಚೌಡೇನಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.


ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವಚ್ಛ ಸಂಕೀರ್ಣ ಘಟಕಗಳಲ್ಲಿ ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಆಯಾ ತಾಲೂಕಿನ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕಗಳಿಗೆ ಸಾಗಿಸಿ ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆ ಮಾಡಲಾಗುವುದು ಎಂದು ಅವರು ತಿಳಿಸಿದರು.


‘ತ್ಯಾಜ್ಯದಿಂದ ಸಂಪತ್ತು’ ಪರಿಕಲ್ಪನೆಯಡಿ ಈ ಘಟಕಗಳಲ್ಲಿ ಸ್ವಸಹಾಯ ಸಂಘಗಳ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು. ಪ್ಲಾಸ್ಟಿಕ್ ತ್ಯಾಜ್ಯವನ್ನು ವಿವಿಧ ಮಾದರಿಗಳಾಗಿ ವಿಂಗಡಿಸಿ, ಬೇಲಿಂಗ್ ಪ್ರಕ್ರಿಯೆ ನಡೆಸಿ, ಸಿಮೆಂಟ್ ಉತ್ಪಾದನಾ ಕಾರ್ಖಾನೆಗಳಿಗೆ ಮಾರಾಟ ಮಾಡಲು ಅಗತ್ಯ ಯಂತ್ರೋಪಕರಣಗಳನ್ನು ಒದಗಿಸಲಾಗುತ್ತದೆ ಎಂದು ನಂದಿನಿ ಮಾಹಿತಿ ನೀಡಿದರು.


ಜಿಲ್ಲೆಗೆ ಮಂಜೂರಾಗಿರುವ ನಾಲ್ಕು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕಗಳು (PWMU) ಜೂನ್ ಅಂತ್ಯದೊಳಗೆ ಕಾರ್ಯಾರಂಭ ಮಾಡುವಂತೆ ಅಗತ್ಯ ಕ್ರಮ ಕೈಗೊಳ್ಳಲು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !