ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟ್‌ನಲ್ಲಿ ಜೂನ್ 15ರಿಂದ ಮಳೆಗಾಲ ಮುಗಿಯುವವರೆಗೂ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಆಗುಂಬೆ ಘಾಟ್‌ನಲ್ಲಿ ಭಾರೀ ವಾಹನಗಳು ಓಡಾಡುವಂತಿಲ್ಲ. ಈ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚಾರ ಮಾಡಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಶಿವಮೊಗ್ಗದಿಂದ ಹೊಸನಗರ-ಮಾಸ್ತಿಕಟ್ಟೆ ಮಾರ್ಗವಾಗಿ ಕುಂದಾಪುರ ಮತ್ತು ಉಡುಪಿಗೆ ಸಂಪರ್ಕ ಕಲ್ಪಿಸುವ ಹುಲಿಕಲ್ ಘಾಟಿಯಲ್ಲಿ ಭೂಕುಸಿತ ಸಂಭವಿಸಿದ ನಂತರ ನಡೆಯುತ್ತಿರುವ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ-ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಹೆಚ್ಚಾಗಿದ್ದು, ಇಲ್ಲಿಯೂ ಭೂಕುಸಿತ ಆಗುವ ಸಂಭವವಿದೆ. ಭೂಕುಸಿತ ಸಂಭವಿಸಿದರೆ ಇಡೀ ರಸ್ತೆಯನ್ನು ಬಂದ್ ಮಾಡಬೇಕಿದೆ. ಶಿವಮೊಗ್ಗ, ಉಡುಪಿ, ಮಂಗಳೂರು, ಮಣಿಪಾಲ್, ದಾವಣಗೆರೆ , ಚಿತ್ರದುರ್ಗ ಹಾಗೂ ಹಾವೇರಿ ಜಿಲ್ಲೆಯ ನಾಗರಿಕರಿಗೆ ಸಂಪರ್ಕ ಬಂದ್ ಆಗಲಿದೆ. ಇದರಿಂದ ಭಾರೀ ತೊಂದರೆ ಅನುಭವಿಸಬೇಕಾಗುತ್ತದೆ. ಎಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಜೂನ್ 15 ರಿಂದಲೇ ಭಾರೀ ವಾಹನಗಳ ಓಡಾಟ ಬಂದ್ ಮಾಡಲಾಗಿದೆ.



