ಹೊಸದಿಗಂತ ವರದಿ ಕಲಬುರಗಿ:
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ಅವಘಡದಲ್ಲಿ ಮೇಲ್ಛಾವಣಿಯ ಪದರು ಏಕಾಏಕಿ ಕುಸಿದು ಬಿದ್ದ ಪರಿಣಾಮ ಐವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ.
ಗಾಯಗೊಂಡ ವಿದ್ಯಾರ್ಥಿನಿಯರನ್ನು ಸೃಷ್ಠಿ, ಸ್ನೇಹಾ, ಶೀತಲ್, ಪೂಜಾ ಹಾಗೂ ದಿವ್ಯಾ ಎಂದು ಗುರುತಿಸಲಾಗಿದೆ. ಪಾಠ ನಡೆಯುತ್ತಿದ್ದ ವೇಳೆ ತರಗತಿ ಕೊಠಡಿಯ ಮೇಲ್ಛಾವಣಿಯ ಪದರು ಹಠಾತ್ ಕುಸಿದು ಬಿದ್ದಿದ್ದು, ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ.
ಅವಘಡ ಸಂಭವಿಸುತ್ತಿದ್ದಂತೆಯೇ ವಿದ್ಯಾರ್ಥಿನಿಯರು ಆತಂಕಗೊಂಡು ತರಗತಿಯಿಂದ ಹೊರಗೆ ಓಡಿದ ದೃಶ್ಯ ಕಾಲೇಜಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಬಳಿಕ ಕಾಲೇಜು ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಗಾಯಗೊಂಡ ವಿದ್ಯಾರ್ಥಿನಿಯರನ್ನು ತಕ್ಷಣವೇ ಚಿಕಿತ್ಸೆಗಾಗಿ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಸಿಸಿಟಿವಿಯಲ್ಲಿ ಸೆರೆಯಾದ ಅವಘಡದ ಕ್ಷಣ ತರಗತಿಯಲ್ಲಿ ವಿದ್ಯಾರ್ಥಿನಿಯರು ಪಾಠ ಆಲಿಸುತ್ತಿದ್ದ ವೇಳೆ ಮೇಲ್ಛಾವಣಿಯ ಪದರು ಕುಸಿದು ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪದರು ಕುಸಿಯುತ್ತಿದ್ದಂತೆಯೇ ವಿದ್ಯಾರ್ಥಿನಿಯರು ಭಯಭೀತರಾಗಿ ಚೆಲ್ಲಾಪಿಲ್ಲಿಯಾಗಿ ಓಡಿ ಸುರಕ್ಷಿತ ಸ್ಥಳಕ್ಕೆ ತೆರಳಿರುವುದು ದೃಶ್ಯಗಳಲ್ಲಿ ಕಂಡುಬಂದಿದೆ.



