June 13, 2026
Saturday, June 13, 2026
spot_img

ಬಹುಕೋಟಿ ವಂಚನೆ ಪ್ರಕರಣ: ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ್‌ಗೆ ಷರತ್ತುಬದ್ಧ ಜಾಮೀನು ಮಂಜೂರು

ಹೊಸದಿಗಂತ ವರದಿ ಬೆಳಗಾವಿ:

ಹೂಡಿಕೆದಾರರಿಗೆ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಸುಮಾರು 4,500 ಕೋಟಿ ರೂಪಾಯಿ ವಂಚನೆ ನಡೆಸಿದ ಆರೋಪ ಎದುರಿಸುತ್ತಿರುವ, ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ್ ಅವರಿಗೆ ಬೆಂಗಳೂರಿನ 93ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಲಯವು ಆರೋಪಿಗೆ ಕಠಿಣ ಷರತ್ತುಗಳನ್ನು ವಿಧಿಸಿದೆ. 3 ಲಕ್ಷ ರೂಗಳ ವೈಯಕ್ತಿಕ ಬಾಂಡ್ ಸಲ್ಲಿಸುವುದರ ಜೊತೆಗೆ ಯಾವುದೇ ಕಾರಣಕ್ಕೂ ದೇಶ ತೊರೆಯಬಾರದು ಎಂಬ ಷರತ್ತಿನ ಮೇರೆಗೆ ಜಾಮೀನು ನೀಡಲಾಗಿದೆ.

ಪ್ರಸ್ತುತ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಿವಾನಂದ ನೀಲಣ್ಣವರ್, ಜಾಮೀನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಸೋಮವಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:

ಪ್ರಕರಣದ ಹಿನ್ನೆಲೆ:

ಆರೋಪದ ಪ್ರಕಾರ, ಶಿವಾನಂದ ನೀಲಣ್ಣವರ್ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ, ಭಾರತೀಯ ರಿಸರ್ವ್ ಬ್ಯಾಂಕ್ ಹಾಗೂ ಸೆಬಿಯಿಂದ ಅಗತ್ಯ ಅನುಮೋದನೆ ಅಥವಾ ಪರವಾನಗಿ ಪಡೆಯದೇ ಕಾನೂನುಬಾಹಿರ ಹಣಕಾಸು ಚಟುವಟಿಕೆ ನಡೆಸುತ್ತಿದ್ದರು. ಸಾರ್ವಜನಿಕರಿಗೆ ಹೆಚ್ಚಿನ ಬಡ್ಡಿದರದ ಭರವಸೆ ನೀಡಿ ಸಾವಿರಾರು ಹೂಡಿಕೆದಾರರಿಂದ ಸುಮಾರು 4,500 ಕೋಟಿ ರೂಪಾಯಿ ಸಂಗ್ರಹಿಸಿ ವಂಚನೆ ಎಸಗಿರುವ ಆರೋಪ ಕೇಳಿಬಂದಿದೆ.

ಈ ಸಂಬಂಧ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದರು. ಇದೀಗ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣ ಮತ್ತೊಮ್ಮೆ ಸಾರ್ವಜನಿಕರ ಗಮನ ಸೆಳೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !