ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಹನ್ನೆರಡು ವರ್ಷಗಳಲ್ಲಿ ದೇಶದ ಆರೋಗ್ಯ ವ್ಯವಸ್ಥೆಯನ್ನು ಹೆಚ್ಚು ಜನಸ್ನೇಹಿಯಾಗಿ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಕೆಲಸಗಳು ನಡೆದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಣಮಟ್ಟದ ಆರೋಗ್ಯ ಸೇವೆಯನ್ನು ಸಾಮಾನ್ಯ ಜನರಿಗೂ ಸುಲಭವಾಗಿ ತಲುಪಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಆಯುಷ್ಮಾನ್ ಭಾರತ್ ಯೋಜನೆಯ ಮೂಲಕ ಬಡ ಮತ್ತು ದುರ್ಬಲ ವರ್ಗದ ಜನರಿಗೆ ಉತ್ತಮ ವೈದ್ಯಕೀಯ ಸೌಲಭ್ಯ ದೊರೆಯುತ್ತಿದೆ ಎಂದು ಪ್ರಧಾನಿ ಉಲ್ಲೇಖಿಸಿದ್ದಾರೆ. ಇದೇ ವೇಳೆ ಜನೌಷಧಿ ಯೋಜನೆಯಿಂದ ಕಡಿಮೆ ದರದಲ್ಲಿ ಔಷಧಿಗಳು ಲಭ್ಯವಾಗಿದ್ದು, ಲಕ್ಷಾಂತರ ಕುಟುಂಬಗಳಿಗೆ ನೆರವಾಗಿದೆ ಎಂದು ಹೇಳಿದ್ದಾರೆ.
ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿದ ಅವಕಾಶ
ಕಳೆದ ಕೆಲವು ವರ್ಷಗಳಲ್ಲಿ ವೈದ್ಯಕೀಯ ಕಾಲೇಜುಗಳು ಮತ್ತು ಸೀಟುಗಳ ಸಂಖ್ಯೆ ಹೆಚ್ಚಳಗೊಂಡಿರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯುವ ಅವಕಾಶ ದೊರಕಿದೆ ಎಂದು ಮೋದಿ ಹೇಳಿದ್ದಾರೆ.
ಇದನ್ನೂ ಓದಿ:
ರೋಗ ನಿಯಂತ್ರಣಕ್ಕೂ ವಿಶೇಷ ಒತ್ತು
ಕ್ಷಯರೋಗ ಸೇರಿದಂತೆ ಹಲವು ಕಾಯಿಲೆಗಳ ವಿರುದ್ಧ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಆರೋಗ್ಯ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸುವ ದಿಸೆಯಲ್ಲಿ ಸರ್ಕಾರ ಮುಂದೆಯೂ ಕಾರ್ಯನಿರ್ವಹಿಸಲಿದೆ ಎಂದು ಪ್ರಧಾನಿ ತಿಳಿಸಿದ್ದಾರೆ. MyGov India ಕೂಡ ಆರೋಗ್ಯ ಸೇವೆಗಳ ವಿಸ್ತರಣೆ ಮತ್ತು ವೈದ್ಯಕೀಯ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ದೇಶ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ಹೇಳಿದೆ.



