ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀಟ್-ಯುಜಿ ಮರುಪರೀಕ್ಷೆಯ ಭದ್ರತೆ, ಪಾರದರ್ಶಕತೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಟೆಲಿಗ್ರಾಮ್ ಅಪ್ಲಿಕೇಶನ್ಗೆ ತಾತ್ಕಾಲಿಕ ನಿರ್ಬಂಧ ಕ್ರಮವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದ್ದು, ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಟೆಲಿಗ್ರಾಮ್ ಅರ್ಜಿಯನ್ನು ವಜಾಗೊಳಿಸಿದೆ.
ಟೆಲಿಗ್ರಾಮ್ ಸೇರಿದಂತೆ ಕೆಲವು ಡಿಜಿಟಲ್ ವೇದಿಕೆಗಳ ಮೂಲಕ ಪ್ರಶ್ನೆಪತ್ರಿಕೆ ಸೋರಿಕೆ, ನಕಲಿ ಪ್ರಶ್ನೆಪತ್ರಿಕೆ ಹರಡುವಿಕೆ ಅಥವಾ ಪರೀಕ್ಷೆಗೆ ಸಂಬಂಧಿಸಿದ ಸುಳ್ಳು ಮಾಹಿತಿ ರವಾನೆ ಸಾಧ್ಯತೆಗಳ ಬಗ್ಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಹಾಗೂ ಭದ್ರತಾ ಸಂಸ್ಥೆಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದವು. ಇದರ ಆಧಾರದ ಮೇಲೆ ಸರ್ಕಾರ ತಾತ್ಕಾಲಿಕ ನಿರ್ಬಂಧದ ನಿರ್ಧಾರ ಕೈಗೊಂಡಿತ್ತು. ಆದರೆ ಈ ಕ್ರಮವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಪರೀಕ್ಷೆಯಂತಹ ಸೂಕ್ಷ್ಮ ಸಂದರ್ಭಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ಮತ್ತು ವಿದ್ಯಾರ್ಥಿಗಳ ಭವಿಷ್ಯವೇ ಪ್ರಮುಖವಾಗಿದ್ದು, ಸರ್ಕಾರದ ಮುನ್ನೆಚ್ಚರಿಕಾ ಕ್ರಮವನ್ನು ಅಸಮಂಜಸ ಎಂದು ಹೇಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಪರೀಕ್ಷಾ ಅವಧಿಯಲ್ಲಿ ಯಾವುದೇ ರೀತಿಯ ಪರೀಕ್ಷಾ ಸಾಮಗ್ರಿಗಳ ಸೋರಿಕೆ ಅಥವಾ ಸಂದೇಶ ವಿನಿಮಯ ತಡೆಯುವುದು ಸರ್ಕಾರದ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕೈಗೊಂಡಿರುವ ತಾತ್ಕಾಲಿಕ ನಿರ್ಬಂಧವು ಸಮರ್ಥನೀಯ, ಕಾನೂನುಬದ್ಧವಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಅಧಿಕಾರಿಗಳು, ಪರೀಕ್ಷೆಯ ವಿಶ್ವಾಸಾರ್ಹತೆ ಕಾಪಾಡುವುದು ಅತ್ಯಂತ ಮುಖ್ಯ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಕೆಲವು ದಿನಗಳ ಕಾಲ ಮಾತ್ರ ಈ ಕ್ರಮ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದರು. ಈ ವಾದವನ್ನು ನ್ಯಾಯಾಲಯ ಒಪ್ಪಿಕೊಂಡಿದೆ. ನ್ಯಾಯಾಲಯದ
ಈ ತೀರ್ಪಿನೊಂದಿಗೆ ನೀಟ್-ಯುಜಿ ಮರುಪರೀಕ್ಷೆಗೆ ಸಂಬಂಧಿಸಿದ ಭದ್ರತಾ ಕ್ರಮಗಳಿಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ.



