June 27, 2026
Saturday, June 27, 2026
spot_img

WEATHER | ಕರಾವಳಿಯಲ್ಲಿ ಹೆಚ್ಚಿದ ಸಮುದ್ರದ ಅಲೆಗಳ ಅಬ್ಬರ: ಮುಂದಿನ ದಿನಗಳಲ್ಲಿ ಭಾರೀ ಮಳೆ ಭೀತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗಗಳಲ್ಲಿ ವರುಣನ ಆರ್ಭಟ ತೀವ್ರಗೊಳ್ಳಲಿದೆ.

ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ರಾಜ್ಯದ ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಈ ಭಾಗಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.

ಕರಾವಳಿಯಲ್ಲಿ ಹೈ ಅಲರ್ಟ್: ಮೀನುಗಾರರಿಗೆ ಎಚ್ಚರಿಕೆ

ಕರಾವಳಿ ತೀರದಲ್ಲಿ ಮುಂಗಾರು ಮಾರುತಗಳು ಚುರುಕಾಗಿವೆ. ಉತ್ತರ ಕನ್ನಡದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದರೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಿರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ ಮತ್ತು ಧಾರವಾಡದ ಕೆಲವೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಜಾಗರೂಕರಾಗಿರಲು ಕೋರಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !