ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್‌ಎಸ್‌ಎಸ್ ಗುರಿಯಾಗಿಸಿ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಅವಹೇಳನಕಾರಿ ಹೇಳಿಕೆ ಪೋಸ್ಟ್ ಮಾಡಿದ ಘಟನೆ ಈಗ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್‌ಗೆ ಕಾನೂನಿನ ಸಂಕಷ್ಟ ತಂದಿಟ್ಟಿದೆ.
ಈ ಕುರಿತು ಸಲ್ಲಿಕೆಯಾಗಿದ್ದ ಮಾನಹಾನಿ ದೂರಿನ ವಿಚಾರಣೆ ಬಳಿಕ ಇವರುಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಬೆಂಗಳೂರಿನ ನ್ಯಾಯಾಲಯ ಅನುಮತಿ ನೀಡಿದ್ದು, ಇಬ್ಬರಿಗೂ ಸಮನ್ಸ್ ಜಾರಿಗೊಳಿಸಿದೆ.
ಆರ್‌ಎಸ್‌ಎಸ್ ಕಾರ್ಯಕರ್ತ ಎ. ತೇಜಸ್ ಎಂಬವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಜೆಎಂ (ACJM) ವಿಶೇಷ ನ್ಯಾಯಾಲಯ, ಪ್ರಕರಣದಲ್ಲಿ ಪ್ರಾಥಮಿಕ ವಿಚಾರಣೆಗೆ ಸಾಕಷ್ಟು ಆಧಾರಗಳಿವೆ ಎಂದು ಪರಿಗಣಿಸಿ, ಇಬ್ಬರು ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿದೆ. ನ್ಯಾಯಾಲಯವು ಜುಲೈ 21ರಂದು ಪ್ರಿಯಾಂಕ್ ಖರ್ಗೆ ಮತ್ತು ಹ್ಯಾರಿಸ್ ನಲಪಾಡ್ ಖುದ್ದಾಗಿ ನ್ಯಾಯಾಲಯದ ಮುಂದೆ ಹಾಜರಾಗುವಂತೆ ನಿರ್ದೇಶನ ನೀಡಿದೆ.
ಇದನ್ನೂ ಓದಿ:
ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಶಾಲೆಗಳು ಹಾಗೂ ಸಾರ್ವಜನಿಕ ಮೈದಾನಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗೆ ಪತ್ರ ಬರೆದ ಬಳಿಕ, ತಮ್ಮ ಎಕ್ಸ್ ಖಾತೆಯಲ್ಲಿ ನಿಮ್ಮ ಕುಟುಂಬ ಸದಸ್ಯರಾಗಿದ್ದರೂ ಸಹ ಆರ್‌ಎಸ್‌ಎಸ್ ಸದಸ್ಯರೊಂದಿಗೆ ಸ್ನೇಹ ಬೆಳೆಸಬೇಡಿ, ಅವರು ಅತ್ಯಂತ ವಿಷಪೂರಿತ ಎಂಬರ್ಥದ ಆಕ್ಷೇಪಾರ್ಹ ಸಾಲುಗಳನ್ನು ಪೋಸ್ಟ್ ಮಾಡಿದ್ದರು. ಇದೇ ರೀತಿ, ಹ್ಯಾರಿಸ್ ನಲಪಾಡ್ ಅವರು ಯೂಟ್ಯೂಬ್ ಚಾನೆಲ್‌ನಲ್ಲಿ ಸಂಘಟನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹೇಳಿಕೆಗಳು ಆರ್‌ಎಸ್‌ಎಸ್‌ನ ಘನತೆ ಹಾಗೂ ಪ್ರತಿಷ್ಠೆಗೆ ಧಕ್ಕೆ ತಂದಿವೆ ಎಂದು ಆರೋಪಿಸಿ ದೂರುದಾರ ಎ. ತೇಜಸ್ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದೇ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿದ್ದ ಸಚಿವ ದಿನೇಶ್ ಗುಂಡೂರಾವ್ ವಿರುದ್ಧದ ಪ್ರಕ್ರಿಯೆಯನ್ನು ನ್ಯಾಯಾಲಯ ಆರಂಭಿಕ ಹಂತದಲ್ಲೇ ಕೈಬಿಟ್ಟಿದೆ.
ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಮಹತ್ವ ಪಡೆದಿದ್ದು, ಜುಲೈ 21ರಂದು ನಡೆಯಲಿರುವ ವಿಚಾರಣೆಯತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.



