ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಗೆ ಆರೆಂಜ್ ಅಲರ್ಟ್: ಮೀನುಗಾರರಿಗೆ ಎಚ್ಚರಿಕೆ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ, ಕಡಲತೀರದ ನಿವಾಸಿಗಳು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಾಗರೂಕತೆ ವಹಿಸಲು ಸೂಚಿಸಲಾಗಿದೆ.
ಮಲೆನಾಡು ಮತ್ತು ಉತ್ತರ ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಕೆಲವು ಪ್ರದೇಶಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಬಾಗಲಕೋಟೆ, ಬೀದರ್, ಗದಗ, ಕಲ್ಬುರ್ಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಸ್ಥಿತಿ
ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ಕೋಲಾರ ಮತ್ತು ಚಿತ್ರದುರ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.



