July 4, 2026
Saturday, July 4, 2026
spot_img

ಬರ ನಿರ್ವಹಣೆ ಸರ್ಕಾರದಿಂದ ಸಲಕ ಸಿದ್ಧತೆ : ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಹೊಸದಿಗಂತ ವರದಿ ಚಿತ್ರದುರ್ಗ:

ರಾಜ್ಯದಲ್ಲಿ ಬರ ಮತ್ತು ಪ್ರಕೃತಿ ವಿಕೋಪ ನಿರ್ವಹಣೆಗೆ ಸರ್ಕಾರವು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಪ್ರತಿಯೊಂದು ಜಿಲ್ಲೆಯ ಜಿಲ್ಲಾಧಿಕಾರಿಗಳ ಖಾತೆಗೆ ತಲಾ 5 ಕೋಟಿ ರೂಪಾಯಿಗಳನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಚಿತ್ರದುರ್ಗ ಜಿಲ್ಲಾ ಪ್ರಕೃತಿ ವಿಕೋಪ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.

ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪ್ರಕೃತಿ ವಿಕೋಪ ಪರಿಶೀಲನಾ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಪ್ರಮುಖ ಸೂಚನೆಗಳನ್ನು ನೀಡಿದರು.

ಬರ ಮತ್ತು ಪ್ರಕೃತಿ ವಿಕೋಪ ನಿರ್ವಹಣೆಯ ಒಟ್ಟಾರೆ ಜವಾಬ್ದಾರಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೇಲಿರುತ್ತದೆ. ಜಿಲ್ಲಾಧಿಕಾರಿಗಳ ರೂ. 5 ಕೋಟಿ ಹಣವನ್ನು ಬರ ಮತ್ತು ಪ್ರಕೃತಿ ವಿಕೋಪದ ತುರ್ತು ಕಾರ್ಯಗಳಿಗೆ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಹೆಚ್ಚುವರಿ ಅನುದಾನದ ಅಗತ್ಯವಿದ್ದಲ್ಲಿ ತಕ್ಷಣವೇ ಪ್ರಸ್ತಾವನೆ ಸಲ್ಲಿಸಬೇಕು. ಅದಕ್ಕೆ ತಕ್ಷಣವೇ ಅನುಮೋದನೆ ನೀಡಲಾಗುವುದು. ಈ ಬಗ್ಗೆ ಯಾವುದೇ ಆತಂಕ ಬೇಡ ಎಂದರು.

ಕೊಳವೆ ಬಾವಿಗಳ ವಿದ್ಯುದ್ದೀಕರಣಕ್ಕೆ ಗಡುವು :

ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಲು, ಹೊಸದಾಗಿ ಕೊರೆದಿರುವ ಹಾಗೂ ಬಾಕಿ ಇರುವ ಎಲ್ಲಾ ಕುಡಿಯುವ ನೀರಿನ ಕೊಳವೆ ಬಾವಿಗಳಿಗೆ ಕೇವಲ 15 ದಿನಗಳ ಒಳಗೆ ಕಡ್ಡಾಯವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಬೆಸ್ಕಾಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಸಾಮಾನ್ಯವಾಗಿ ಎಲ್ಲಾ ಪ್ರಗತಿ ಪರಿಶೀಲನಾ ಸಭೆಗಳಲ್ಲೂ ಕೊಳವೆ ಬಾವಿ ಕೊರೆದರೂ ಪಂಪ್ ಹಾಗೂ ಮೋಟಾರ್ ಅಳವಡಿಸದಿರುವುದು ಅಥವಾ ಮೋಟಾರ್ ಇದ್ದರೂ ವಿದ್ಯುತ್ ಸಂಪರ್ಕ ನೀಡದೆ ಇರುವ ಸಮಸ್ಯೆಗಳು ಕೇಳಿಬರುತ್ತಿವೆ. ಇದಕ್ಕೆ ಇನ್ನು ಮುಂದೆ ಆಸ್ಪದ ನೀಡಬಾರದು ಎಂದರು.

ಅಧಿಕಾರಿಗಳಿಗೆ ಕೇಂದ್ರಸ್ಥಾನದಲ್ಲಿರಲು ತಾಕೀತು:

ನೋಡಲ್ ಅಧಿಕಾರಿಗಳ ಜವಾಬ್ದಾರಿ ಮತ್ತು ವರದಿ ಪ್ರತಿ ತಾಲೂಕಿಗೆ ನೇಮಕವಾಗಿರುವ ನೋಡಲ್ ಅಧಿಕಾರಿಗಳು ತಾಲೂಕಿನ ಕುಡಿಯುವ ನೀರಿನ ಸಮಸ್ಯೆ, ಒಣಗುತ್ತಿರುವ ಬೋರ್‌ವೆಲ್‌ಗಳು ಹಾಗೂ ಮಳೆಯ ಪರಿಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನಿರಂತರವಾಗಿ ದೈನಂದಿನ ವರದಿ ನೀಡಬೇಕು. ಎಲ್ಲಾದರೂ ನೀರಿನ ಸಮಸ್ಯೆ ತಲೆದೂರಿದರೆ ತಕ್ಷಣವೇ ಮೇಲಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಶುದ್ಧ ಕುಡಿಯುವ ನೀರು ಸರಬರಾಜಿಗೆ ಸೂಚನೆ:

ಮಳೆಗಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ಕಲುಷಿತ ನೀರು ಸರಬರಾಜಾಗದಂತೆ ಅಧಿಕಾರಿಗಳು ತೀವ್ರ ನಿಗಾವಹಿಸಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಳೆಗಾಲದಲ್ಲಿ ಪೈಪ್‌ಲೈನ್‌ಗಳ ಮೂಲಕ ನೀರು ಸರಬರಾಜು ಮಾಡುವಾಗ ವಿಶೇಷ ಎಚ್ಚರಿಕೆ ಅಗತ್ಯ. ಕೆಲವು ಕಡೆಗಳಲ್ಲಿ ಪೈಪ್‌ಗಳನ್ನು ಸರಿಯಾಗಿ ಜೋಡಿಸದೇ ಇರುವುದರಿಂದ ನೀರು ನಿಂತು ಪಾಚಿ ಕಟ್ಟಿಕೊಳ್ಳುತ್ತದೆ. ನೀರು ಸರಬರಾಜು ಸ್ಥಗಿತಗೊಂಡು, ಬಳಿಕ ಮತ್ತೆ ಮೋಟಾರ್ ಆನ್ ಮಾಡಿದಾಗ ಸುತ್ತಮುತ್ತಲಿನ ಕಲುಷಿತ ನೀರು ಪೈಪ್‌ಲೈನ್‌ಗೆ ಮರುಸಂಗ್ರಹಣೆ (ಸಕ್ಷನ್) ಆಗುವ ಅಪಾಯ ಇರುತ್ತದೆ. ಇದರಿಂದಾಗಿ ಕಲುಷಿತ ನೀರು ಸಾರ್ವಜನಿಕರಿಗೆ ಸರಬರಾಜಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದರು.

ಮಳೆ ಮಾಪನ ಕೇಂದ್ರಗಳ ದುರಸ್ತಿಗೆ ನಿರ್ದೇಶನ:

ಪ್ರಕೃತಿ ವಿಕೋಪದ ಸಂದರ್ಭದಲ್ಲಿ ನಿಖರವಾದ ಮಾಹಿತಿಯನ್ನು ಪಡೆಯಲು ಮಳೆ ಮಾಪನ ಕೇಂದ್ರಗಳು ಅತ್ಯಂತ ಪ್ರಮುಖವಾಗಿವೆ. ಜಿಲ್ಲೆಯಲ್ಲಿರುವ ಒಟ್ಟು 201 ಮಳೆ ಮಾಪನ ಕೇಂದ್ರಗಳಲ್ಲಿ ಪೈಕಿ ದುರಸ್ತಿಯಲ್ಲಿರುವ ಅಥವಾ ಸರಿಯಾಗಿ ಕಾರ್ಯನಿರ್ವಹಿಸದ ಎಲ್ಲಾ ಕೇಂದ್ರಗಳನ್ನು ತಕ್ಷಣವೇ ದುರಸ್ತಿಗೊಳಿಸಿ, ಅವುಗಳು ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ನಿರ್ದೇಶನ ನೀಡಿದರು.

ಇದನ್ನೂ ಓದಿ:

ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರದ ಆಯುಕ್ತೆ ಹೊನ್ನಾಂಭ ಮಾನತಾಡಿ, ಜಿಲ್ಲೆಯಲ್ಲಿ ಸದ್ಯ ಒಟ್ಟು 201 ಮಳೆ ಮಾಪನ ಕೇಂದ್ರಗಳನ್ನು ಅಳವಡಿಸಲಾಗಿದೆ. ಇವುಗಳಲ್ಲಿ ಸದ್ಯ 126 ಕೇಂದ್ರಗಳು ಲಭ್ಯವಿದ್ದು, 109ಕೇಂದ್ರಗಳು ಸುಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಉಳಿದ 17 ಕೇಂದ್ರಗಳು ರಿಪೇರಿಯಾಗಬೇಕಾಗಿದ್ದು, ಅದರಲ್ಲಿ ಈಗಾಗಲೇ 9 ಕೇಂದ್ರಗಳನ್ನು ದುರಸ್ತಿ ಮಾಡಲಾಗಿದ್ದು, ಇನ್ನ 7 ಕೇಂದ್ರಗಳ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಲಾಗಿದೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !