ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದ್ದು, ಮುಂದಿನ ಕೆಲವು ದಿನಗಳ ಕಾಲ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಳಗಾವಿ, ಧಾರವಾಡ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ ಸೇರಿದಂತೆ ಒಟ್ಟು 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 50ರಿಂದ 60 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ.
ಇದನ್ನೂ ಓದಿ:
ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಭಾರೀ ಮಳೆಯ ಸಾಧ್ಯತೆ ವ್ಯಕ್ತವಾಗಿದ್ದು, ಗಾಳಿಯ ವೇಗವೂ ಹೆಚ್ಚಿರಬಹುದು ಎಂದು ಇಲಾಖೆ ತಿಳಿಸಿದೆ. ಚಾಮರಾಜನಗರ, ಮಂಡ್ಯ, ತುಮಕೂರು, ಚಿತ್ರದುರ್ಗ, ಕೋಲಾರ, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.



