July 6, 2026
Monday, July 6, 2026
spot_img

2028ರೊಳಗೆ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣ; ಆಗಸ್ಟ್‌ನಿಂದ ಪ್ರಾಯೋಗಿಕ ನೀರು ಹರಿವು: ರಾಮಲಿಂಗಾರೆಡ್ಡಿ

ಹೊಸದಿಗಂತ ವರದಿ ಚಿತ್ರದುರ್ಗ:

‘ಭದ್ರಾ ಮೇಲ್ದಂಡೆ ಯೋಜನೆ’ ಕಾಮಗಾರಿಗಳಿಗೆ ವೇಗ ನೀಡಲಾಗಿದ್ದು, 2028ರ ಒಳಾಗಾಗಿ ಎಲ್ಲಾ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಯೋಜನೆಯ ಪ್ರಮುಖ ಅಂಗವಾದ ಚಿತ್ರದುರ್ಗ ಶಾಖಾ ಕಾಲುವೆಗೆ, ಭದ್ರಾ ಜಲಾಶಯದಲ್ಲಿ ನೀರಿನ ಲಭ್ಯತೆ ಆಧರಿಸಿ ಮುಂಬರುವ ಆಗಸ್ಟ್-2026 ವೇಳಗೆ ಪ್ರಾಯೋಗಿಕವಾಗಿ ನೀರನ್ನು ಹರಿಸಿ ಚಾಲನೆ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಚಿತ್ರದುರ್ಗ ಶಾಖಾ ಕಾಲುವೆ ಗೋನೂರು ಅಕ್ವಾಡಕ್ಟ್ ಕಾಮಗಾರಿ ವೀಕ್ಷಿಸಿದ ಸಚಿವ ರಾಮಲಿಂಗಾರೆಡ್ಡಿ ಅವರು ನಂತರ ಚಿತ್ರದುರ್ಗ ನಗರದ ಭದ್ರಾ ಮೇಲ್ದಂಡೆ ಯೋಜನಾ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಹಾಗೂ ಈ ಭಾಗದ ರೈತರ ಬಹುಕಾಲದ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯನ್ನು ೨೦೨೮ರ ವೇಳೆಗೆ ಸಂಪೂರ್ಣವಾಗಿ ಪೂರ್ಣಗೊಳಿಸಿ, ಜನರಿಗೆ ನೀರು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಚಿತ್ರದುರ್ಗ ಶಾಖಾ ಕಾಲುವೆಯು ಒಟ್ಟು ೧೩೪.೫೯೭ ಕಿ.ಮೀ. ಉದ್ದ ಹೊಂದಿದ್ದು, ಇದಕ್ಕೆ ೧೬.೩೬ ಟಿ.ಎಂ.ಸಿ. ನೀರು ಹಂಚಿಕೆ ಮಾಡಲಾಗಿದೆ. ಈ ಮೂಲಕ ಜಗಳೂರು ಶಾಖಾ ಕಾಲುವೆ ಸೇರಿದಂತೆ ಚಳ್ಳಕೆರೆ, ಪಾವಗಡ, ಹೊಳಲ್ಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳ ಕೆರೆಗಳನ್ನು ತುಂಬಿಸಲಾಗುವುದು ಎಂದರು.

ಚಿತ್ರದುರ್ಗ ಶಾಖಾ ಕಾಲುವೆಯ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದ ಹತ್ತಿರವಿರುವ ವೈ-ಜಂಕ್ಷನ್‌ನಿಂದ ಚಿತ್ರದುರ್ಗ ತಾಲೂಕಿನ ಗೋನೂರು ಅಕ್ವೆಡಕ್ಟ್ವರೆಗಿನ ಒಟ್ಟು ೧೧೪ ಕಿಲೋಮೀಟರ್ ವ್ಯಾಪ್ತಿಯ ಎಲ್ಲಾ ಭೂಸ್ವಾಧೀನ ಪ್ರಕ್ರಿಯೆಯ ಅಡೆತಡೆಗಳು ಸಂಪೂರ್ಣವಾಗಿ ನಿವಾರಣೆಯಾಗಿವೆ. ಹೆಗಡೆಹಳ್ಳಿಯ ಬಳಿ ೨೦೦ ಮೀಟರ್ ಕಲ್ಲು ಬಂಡೆಗಳ ಹಾಸು ಎದುರಾಗಿದ್ದು, ಶೀಘ್ರವೇ ಕಲ್ಲು ಬಂಡೆ ತೆರವುಗೊಳಿಸಿ ಯೋಜನೆ ಪೂರ್ಣಗೊಳಿಸಲು ತಾಕೀತು ಮಾಡಿದ್ದೇನೆ. ಉಳಿದಂತೆ ಕಾಲುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಭದ್ರಾ ಜಲಾಶಯದಲ್ಲಿ ನೀರಿನ ಲಭ್ಯತೆಗೆ ಅನುಗುಣವಾಗಿ, ಮುಂಬರುವ ಆಗಸ್ಟ್-೨೦೨೬ ಪ್ರಾಯೋಗಿಕವಾಗಿ ಕಾಲುವೆಯಲ್ಲಿ ನೀರನ್ನು ಹರಿಸಲು ಇಲಾಖೆಯು ಸರ್ವಸನ್ನದ್ಧವಾಗಿ ಯೋಜಿಸಿದೆ ಎಂದು ಹೇಳಿದರು.

ಈ ಪ್ರಾಯೋಗಿಕ ನೀರು ಹರಿಸುವ ಸಂದರ್ಭದಲ್ಲಿ ನಾಲ್ಕು ತಾಲೂಕುಗಳ ಒಟ್ಟು ೭೮ ಕೆರೆಗಳಿಗೆ ನೀರನ್ನು ತುಂಬಿಸಲು ಯೋಜಿಸಲಾಗಿದ್ದು, ಇದರಲ್ಲಿ ಹೊಸದುರ್ಗದ ೩೨ ಕೆರೆಗಳು, ಹೊಳಲ್ಕೆರೆಯ ೩೦ ಕೆರೆಗಳು, ಹಿರಿಯೂರಿನ ೧೨ ಕೆರೆಗಳು ಹಾಗೂ ಚಿತ್ರದುರ್ಗ ತಾಲೂಕಿನ ೪ ಕೆರೆಗಳು ಒಳಗೊಂಡಿವೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಚಿತ್ರದುರ್ಗ ಶಾಖಾ ಕಾಲುವೆಯ ಒಟ್ಟು ಅಚ್ಚುಕಟ್ಟು ಪ್ರದೇಶ ೧,೨೦,೪೬೫ ಹೆಕ್ಟೇರ್ ಆಗಿದ್ದು, ಯೋಜನಾ ವರದಿಯಲ್ಲಿದ್ದ ೧೫೭ ಕೆರೆಗಳ ಜೊತೆಗೆ ಹೆಚ್ಚುವರಿಯಾಗಿ ೩೮೩ ಕೆರೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಅವರು ಚಿತ್ರದುರ್ಗ ತಾಲ್ಲೂಕಿನ ೮ ಕೆರೆಗಳನ್ನು ಯೋಜನೆಯಡಿ ತುಂಬಿಸಲು ಮನವಿ ಮಾಡಿದ್ದಾರೆ. ಈ ವಿಷಯ ಮಂಡಳಿ ಸಭೆಯಲ್ಲಿ ಚರ್ಚಿಸಿ ಅನುಮೋದನೆ ನೀಡುವುದಾಗಿ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು.

ಇದನ್ನೂ ಓದಿ:

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಯಡಿ ಜಿಲ್ಲೆಯ ವಿವಿಧ ತಾಲೂಕುಗಳ ಕೆರೆಗಳಿಗೆ ನೀರು ಉಣಿಸುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ನೀರಾವರಿ ಹಾಗೂ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಭದ್ರಾ ಮೇಲ್ದಂಡೆ ಯೋಜನೆಯು ಅತ್ಯಂತ ಮಹತ್ವದ್ದಾಗಿದೆ. ಈ ಯೋಜನೆಯ ವ್ಯಾಪ್ತಿಗೆ ಒಳಪಡುವ ಕಡೂರು, ತರೀಕೆರೆ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಹಾಗೂ ನಮ್ಮ ಚಳ್ಳಕೆರೆ, ಮೊಳಕಾಲ್ಮೂರು ತಾಲೂಕುಗಳ ಕೆರೆಗಳಿಗೆ ನೀರು ಕೊಡುವ ಕೆಲಸವನ್ನು ಮುಂದಿನ ವರ್ಷದಲ್ಲಿ ಮುಗಿಸಬೇಕೆಂದು ಉದ್ದೇಶಿಸಲಾಗಿದೆ ಎಂದರು.

ಈಗಾಗಲೇ ಸದನದಲ್ಲಿ ಪ್ರಸ್ತಾಪವಾಗಿರುವಂತೆ ೨೦೨೮ರ ಮಾರ್ಚ್ ವೇಳೆಗೆ ಯೋಜನೆಯನ್ನು ಪೂರ್ಣಗೊಳಿಸಲು ಗಡುವು ನಿಗದಿಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿಗಳನ್ನು ಚುರುಕುಗೊಳಿಸಲು ಎಲ್ಲ ಅಗತ್ಯ ಪ್ರಯತ್ನಗಳನ್ನು ನಡೆಸುವಂತೆ ಸಂಬಂಧಪಟ್ಟ ಸಚಿವರಿಗೆ ನಾವೆಲ್ಲರೂ ಮನವಿ ಮಾಡಿದ್ದೇವೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಕ್ರಿಯ ಸಹಭಾಗಿತ್ವದಲ್ಲಿ ಯೋಜನೆ ಶೀಘ್ರವಾಗಿ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕರಾದ ಎನ್.ವೈ.ಗೋಪಾಕೃಷ್ಣ, ಬಿ.ಜಿ.ಗೋವಿಂದಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯರಾದ ಶ್ರೀನಿವಾಸ, ಕೆ.ಎಸ್.ನವೀನ್, ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ರಾಜ್ಯ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಯೋಗೇಶ್‌ಬಾಬು, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ.ಸಿಇಓ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಭದ್ರಾ ಮೇಲ್ದಂಡೆ ಮುಖ್ಯ ಇಂಜಿನಿಯರ್ ರವಿಶಂಕರ್, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಎಂ.ಚಂದ್ರಪ್ಪ ಸೇರಿದಂತೆ ಮತ್ತಿರರು ಹಾಜರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !