July 7, 2026
Tuesday, July 7, 2026
spot_img

ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಷ್ಪಕ್ಷಪಾತವಾಗಿ ನಡೆಯಲು ಸುಪ್ರೀಂ ಕೋರ್ಟ್ ನಿಗಾ ಅಗತ್ಯ: ಗುರುನಾಥ ವಡ್ಡೆ

ಹೊಸದಿಗಂತ್ ವರದಿ ಬೀದರ್

ಬೀದರ್: ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಪಶ್ಚಿಮ ಬಂಗಾಳ ಮಾದರಿಯಲ್ಲಿ ಭಾರತದ ಸುಪ್ರೀಂ ಕೋರ್ಟ್ ನೇರ ನಿಗಾದಲ್ಲಿ ನಡೆಸುವಂತೆ ಸಮಾಜ ಸೇವಕ ಗುರುನಾಥ ವಡ್ಡೆ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ದಾರೆ.

ಕರ್ನಾಟಕದಲ್ಲಿ ಚುನಾವಣಾ ಆಯೋಗವು ಎಸ್‌ಐಆರ್ ಪ್ರಕ್ರಿಯೆ ಆರಂಭಿಸಿರುವ ಸಂದರ್ಭದಲ್ಲಿ ಆಡಳಿತಾರೂಢ ಪಕ್ಷದ ಮುಖಂಡರು, ಸಚಿವರು ಹಾಗೂ ಕಾರ್ಯಕರ್ತರು ಎಸ್‌ಐಆರ್ ಕುರಿತು ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸುತ್ತಿದ್ದು, ಸರ್ಕಾರವೂ ಈ ಪ್ರಕ್ರಿಯೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಎಂದು ಮನವಿಯಲ್ಲಿ ಆರೋಪಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಎಸ್‌ಐಆರ್ ಅನ್ನು ನಿಷ್ಪಕ್ಷಪಾತವಾಗಿ ನಡೆಸುವುದು ಸಾಧ್ಯವಾಗುತ್ತಿಲ್ಲ ಎಂಬ ಆತಂಕ ವ್ಯಕ್ತಪಡಿಸಲಾಗಿದೆ.

ವಿಶೇಷವಾಗಿ ಬೆಂಗಳೂರಿನಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಹಾಗೂ ನಿಯಮಗಳನ್ನು ಉಲ್ಲಂಘಿಸಿ ಪ್ರಾರ್ಥನಾ ಮಂದಿರಗಳು ಮತ್ತು ಕಲ್ಯಾಣ ಮಂಟಪಗಳಲ್ಲಿ ಸಾಮೂಹಿಕವಾಗಿ ಎಸ್‌ಐಆರ್ ನಡೆಸಲಾಗುತ್ತಿದ್ದು, ರಾಜಕೀಯ ಹಸ್ತಕ್ಷೇಪ ಹೆಚ್ಚಾಗಿರುವುದರಿಂದ ಸಾರ್ವಜನಿಕರಲ್ಲಿ ಅನುಮಾನಗಳು ಹೆಚ್ಚಾಗಿವೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ವಿರೋಧ ಪಕ್ಷದ ನಾಯಕರು ಹಾಗೂ ಕೇಂದ್ರ ಸರ್ಕಾರದ ಸಚಿವರೂ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸರ್ಕಾರದ ಹಸ್ತಕ್ಷೇಪ ಕುರಿತು ಆರೋಪ ಮಾಡಿದ್ದು, ಈ ಸಂಬಂಧ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನೂ ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಆದ್ದರಿಂದ ಪಶ್ಚಿಮ ಬಂಗಾಳದಲ್ಲಿ ಅನುಸರಿಸಿದ ಮಾದರಿಯಂತೆ ಕರ್ನಾಟಕದಲ್ಲಿಯೂ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಎಸ್‌ಐಆರ್ ನಡೆಸಬೇಕು. ಯಾವುದೇ ಕಾರಣಕ್ಕೂ ಅನರ್ಹರು ಹಾಗೂ ಬಾಂಗ್ಲಾ ನುಸುಳುಕೋರರು ಮತದಾರರ ಪಟ್ಟಿಗೆ ಸೇರ್ಪಡೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಎಸ್‌ಐಆರ್ ಕುರಿತು ಅಪಪ್ರಚಾರ ನಡೆಸುವವರು, ಸುಳ್ಳು ಮಾಹಿತಿ ಹರಡುವವರು, ರಾಜಕೀಯ ಅಥವಾ ಸರ್ಕಾರಿ ಹಸ್ತಕ್ಷೇಪ ಮಾಡುವವರ ವಿರುದ್ಧ ನ್ಯಾಯಾಂಗ ತನಿಖೆ ನಡೆಸಬೇಕು. ಚುನಾವಣಾ ಆಯೋಗದ ನಿಯಮ ಉಲ್ಲಂಘಿಸಿ ಅನರ್ಹರನ್ನು ಮತದಾರರ ಪಟ್ಟಿಗೆ ಸೇರಿಸಿದರೆ ಸಂಬಂಧಪಟ್ಟವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಇದನ್ನೂ ಓದಿ:

ಭಾರತೀಯ ಸಂವಿಧಾನದ 324ನೇ ವಿಧಿ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ-1950ರ ಸೆಕ್ಷನ್ 21(3)ರ ಪ್ರಕಾರ ಚುನಾವಣಾ ಆಯೋಗಕ್ಕೆ ಎಸ್‌ಐಆರ್ ನಡೆಸುವ ಸಂಪೂರ್ಣ ಅಧಿಕಾರವಿದ್ದು, ಸುಪ್ರೀಂ ಕೋರ್ಟ್ ಕೂಡ ಈ ಕುರಿತು ನಿರ್ದೇಶನ ನೀಡಿದೆ. ಆದರೂ ರಾಜ್ಯದಲ್ಲಿ ಎಸ್‌ಐಆರ್ ಕುರಿತು ಅಪಪ್ರಚಾರ ನಡೆಯುತ್ತಿರುವುದರಿಂದ ಜನರಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ದೇಶದ ಏಕತೆ, ಅಖಂಡತೆ ಹಾಗೂ ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ನಿಗಾದಲ್ಲಿ ನಡೆಸುವಂತೆ ಗುರುನಾಥ ವಡ್ಡೆ ಮನವಿ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !