July 7, 2026
Tuesday, July 7, 2026
spot_img

ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ CSR ಶಾಲೆಗಳ ನಿರ್ಮಾಣಕ್ಕೆ ಸರ್ಕಾರದ ಆದ್ಯತೆ: ಸಿಎಂ ಡಿ.ಕೆ.ಶಿವಕುಮಾರ್

ಹೊಸದಿಗಂತ ವರದಿ ಕಲಬುರಗಿ:

ಕಲಬುರಗಿ ನಗರಗಳತ್ತ ಜನರು ವಲಸೆ ಬರುವುದನ್ನು ತಪ್ಪಿಸಲು ನಮ್ಮ ಸರ್ಕಾರ ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ ಉದ್ಯಮಗಳ ಸೃಷ್ಟಿಗೆ ಉತ್ತೇಜನ ನೀಡಲು ತೀರ್ಮಾನಿಸಿದೆ.ಜೊತೆಗೆ ಗ್ರಾಮೀಣ ಭಾಗಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಿಎಸ್ಆರ್ ಶಾಲೆಗಳ ನಿರ್ಮಾಣಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕಲಬುರಗಿಯಲ್ಲಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ ಉದ್ಯಮ ಸೃಷ್ಟಿಸಲು ಉತ್ತೇಜನ ನೀಡಿ ಉದ್ಯೋಗ ಸೃಷ್ಟಿಸುವುದು ನಮ್ಮ ಗುರಿ. ಉದ್ಯೋಗಕ್ಕಾಗಿ ಗ್ರಾಮೀಣ ಭಾಗದ ಜನರು ನಗರಗಳತ್ತ ವಲಸೆ ಹೋಗುವುದನ್ನು ತಪ್ಪಿಸಿ ಅವರು ಇರುವ ಜಾಗದಲ್ಲೇ ಉದ್ಯೋಗ ಸೃಷ್ಟಿಸಬೇಕು ಎಂಬ ಉದ್ದೇಶದಿಂದ ಅನೇಕ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.

ಕಲಬುರ್ಗಿ ನಗರ ಸೇರಿದಂತೆ ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ ಉದ್ಯಮದವರನ್ನು ಆಕರ್ಷಿಸಲು 0.6ರಷ್ಟು ಪ್ರಿಮಿಯಂ ಎಫ್ಎಆರ್ ಹಾಗೂ 2 ಪಟ್ಟು ಎಫ್ಎಆರ್ ನೀಡಲು ತೀರ್ಮಾನಿಸಿದೆ. ಇದರಿಂದ ಕಡಿಮೆ ದರದಲ್ಲಿ ಉದ್ಯಮದವರಿಗೆ ಜಾಗ ಸಿಗುವಂತಾಗುತ್ತದೆ.ಇದಕ್ಕೆ ಅಗತ್ಯ ತಿದ್ದುಪಡಿಯನ್ನು ನಗರಾಭಿವೃದ್ಧಿ ಸಚಿವಾಲಯದಿಂದ ತರಲಾಗುವುದು ಎಂದು ಹೇಳಿದರು.

ಶಿಕ್ಷಣಕ್ಕಾಗಿ ಗ್ರಾಮೀಣ ಭಾಗದ ಮಕ್ಕಳು ನಗರಗಳತ್ತ ವಲಸೆ ಹೋಗುವುದನ್ನು ತಪ್ಪಿಸಲು ಸಿಎಸ್ಆರ್ ಶಾಲೆಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರಂಭಿಸಲು ತೀರ್ಮಾನಿಸಿದ್ದೇವೆ. ಕಂಪನಿಗಳು 10-15 ಕೋಟಿ ಬಂಡವಾಳ ಹಾಕಿ ನಮಗೆ ಶಾಲೆ ಕಟ್ಟಡ ಹಾಗೂ ಮೂಲಸೌಕರ್ಯ ಒದಗಿಸಿದರೆ ಸಾಕು.ಈ ರೀತಿ 2 ಸಾವಿರ ಶಾಲೆಗಳನ್ನು ನಿರ್ಮಿಸಲಾಗುವುದು. ಈ ಕಂಪನಿಗಳು ನಮಗೆ ಹಣ ನೀಡುವುದು ಬೇಡ. ಅವರೇ ಶಾಲೆ ನಿರ್ಮಿಸಿಕೊಡಬೇಕು. ಶಿಕ್ಷಕರ ನೇಮಕ ಪ್ರಕ್ರಿಯೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು ಎಂದರು.

ಇದನ್ನೂ ಓದಿ:

ಪತ್ರಿಕಾಗೋಷ್ಠಿಯಲ್ಲಿ ಡಿಸಿಎಂ ಜಿ ಪರಮೇಶ್ವರ್,ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ.ಶರಣಪ್ರಕಾಶ್ ಪಾಟೀಲ್, ಕೆಹೆಚ್ ಮುನಿಯಪ್ಪ,ಕೆಕೆಆರಡಿಬಿ ಅಧ್ಯಕ್ಷ ಡಾ ಅಜಯ್ ಸಿಂಗ್, ಶಾಸಕರಾದ ಅಲ್ಲಂಪ್ರಭು ಪಾಟೀಲ್, ಜಗದೇವ್ ಗುತ್ತೇದಾರ್ ಇದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !