ಹೊಪಸದಿಗಂತ ವರದಿ ಚಿತ್ರದುರ್ಗ:
ವಿಧಾನಸೌಧ ಪ್ರಜಾಪ್ರಭುತ್ವದ ದೇಗುಲ ಇದ್ದಂತೆ. ಇಲ್ಲಿ ಉತ್ತಮ ವಿಚಾರಗಳು ಚರ್ಚೆ ಆಗಬೇಕು. ಈ ನಿಟ್ಟಿನಲ್ಲಿ ಯೋಗ್ಯ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಬಿಜೆಪಿ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಬಹತೇಕ ಜನರು ಹಣದ ಅಹಂನಿಂದ, ಹಣವನ್ನು ಖರ್ಚು ಮಾಡಿ ಚುನಾವಣೆ ಗೆಲ್ಲುತ್ತೇವೆ ಎಂಬ ಭ್ರಮೆಯಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ಇದರಿಂದ ವಿಧಾನಸೌಧದಲ್ಲಿ ಫಲಪ್ರದ ಚರ್ಚೆಗಳು ನಡೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮತದಾರರು ಆಲೋಚನೆ ಮಾಡಿ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು ಎಂದರು.
ಕಳೆದ ಹಲವು ಚುನಾವಣೆಗಳಲ್ಲಿ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ನಿರಂತರವಾಗಿ ಬಿಜೆಪಿ ಅಭ್ಯರ್ಥಿಗಳು ಎಂಟು ಬಾರಿ ಗೆಲುವು ಸಾಧಿಸಿದ್ದಾರೆ. ಹಾಗಾಗಿ ಈ ಬಾರಿಯೂ ಈ ಗೆಲುವಿನ ಅಭಿಯಾನ ಮುಂದುವರಿಯಬೇಕು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಅನೇಕ ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಿಸುವಲ್ಲಿ ಶ್ರಮಿಸಿರುವ ಕೆ.ಎಂ.ಸುರೇಶ್ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಹಾಗಾಗಿ ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಚುನಾವಣೆಯಲ್ಲಿ ಸುರೇಶ್ ಅವರನ್ನು ಗೆಲ್ಲಿಸಬೇಕು ಎಂದು ಹೇಳಿದರು.
ಆಡಳಿತ ಪಕ್ಷವೂ ಸಹ ಮತದಾರರನ್ನು ಸೆಳೆಯುವ ಕೆಲಸ ಮಾಡುತ್ತಿದೆ. ಆಗ್ನೇಯ ಪದವೀಧರ ಕ್ಷೇತ್ರ ವ್ಯಾಪ್ತಿಯಲ್ಲಿ ಐದು ಜಿಲ್ಲೆಗಳು 33 ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಹಾಗಾಗಿ ಪಕ್ಷದ ಮುಖಂಡರು ಹೆಚ್ಚಿನ ಜವಾಬ್ಧಾರಿ ತೆಗೆದುಕೊಂಡು ಕೆಲಸ ಮಾಡಬೇಕು. ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಬೇಕು. ಸಕ್ರಿಯವಾಗಿ ಚುನಾವಣೆ ಕೆಲಸ ಮಾಡುವ ಮೂಲಕ ನಮ್ಮ ಅಭ್ಯರ್ಥಿಗೆ ಶೇಕಡಾ ೮೦ ರಷ್ಟು ಮತಗಳು ಬರುವಂತೆ ಮಾಡಬೇಕು. ಪದವೀಧರ ಮತದಾರರು ಬಿಜೆಪಿ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಅವರನ್ನು ಗೆಲ್ಲಿಸಬೇಕು. ಕಾಂಗ್ರೆಸ್ ಪಕ್ಷದ ದುರಾಡಳಿತಕ್ಕೆ ಪಾಠ ಕಲಿಸಬೇಕು ಎಂದರು.
ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ, ಈ ಚುನಾವಣೆಯಲ್ಲಿ ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರ ಜವಾಬ್ಧಾರಿ ಹೆಚ್ಚಿದೆ. ತಾವೇ ಅಭ್ಯರ್ಥಿ ಎಂದು ತಿಳಿದು ಎಲ್ಲರೂ ಗೆಲುವಿಗಾಗಿ ಶ್ರಮಿಸಬೇಕು. ಕ್ಷೇತ್ರದ ವ್ಯಾಪ್ತಿ ಹೆಚ್ಚಿದ್ದು, ೧೩ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಪದವೀಧರರು ಬಿಜೆಪಿ ಅಭ್ಯರ್ಥಿ ಕೆ.ಎಂ.ಸುರೇಶ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ಬಿಜೆಪಿ ಪಕ್ಷ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಈ ಮೊದಲು ಈ ಕ್ಷೇತ್ರದಿಂದ ಚುನಾಯಿತರಾದವರು ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಸುಮಾರು ೫೦ ಸಾವಿರ ಮತದಾರರಿದ್ದಾರೆ. ಎಲ್ಲ ಮತದಾರರನ್ನು ಒಟ್ಟುಗೂಡಿಸಿ ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು. ಹಗಲು ರಾತ್ರಿ ಶ್ರಮಿಸುವ ಮೂಲಕ ಕೆ.ಎಂ.ಸುರೇಶ್ ಅವರನ್ನು ಗೆಲ್ಲಿಸಬೇಕು. ಹೆಚ್ಚು ಹೆಚ್ಚು ಮತದಾರರನ್ನು ಸೆಳೆಯುವ ಮೂಲಕ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಪ್ರಾಸ್ತಾವಿಕವಾಗಿ ಮಾತನಾಡಿ, ಅಕ್ಟೋಬರ್ ತಿಂಗಳಲ್ಲಿ ಚುನಾವಣೆ ಬರಬಹುದು. ಸುಮಾರು 43 ಸಾವಿರ ಮತದಾರರು ನೊಂದಣಿ ಮಾಡಿಸಿದ್ದಾರೆ. ಈ ಸಂಖ್ಯೆ 50 ಸಾವಿರ ತಲುಪಬಹುದು. ಸದಭಿರುಚಿ, ಅಭಿರುಚಿ ಇರುವ ಮತದಾರರನ್ನು ಹುಡುಕಿ ಮತ ಹಾಕಿಸಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಗೆಲುವಿಗಾಗಿ ಶ್ರಮಿಸಬೇಕು ಎಂದರು.
ಇದನ್ನೂ ಓದಿ:
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಆಗ್ನೇಯ ಪದವೀಧರ ಕ್ಷೇತ್ರ ಅಭ್ಯರ್ಥಿ ಕೆ.ಎಂ.ಸುರೇಶ್, ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್, ಮಾಜಿ ಶಾಸಕ ಎಸ್.ಕೆ.ಬಸವರಾಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಶಿವಯೋಗಿಸ್ವಾಮಿ, ವಿಭಾಗ ಸಹ ಪ್ರಭಾರಿ ಎ.ಮುರಳಿ, ಆಗ್ನೇಯ ಚುನಾವಣಾ ಸಹ ಪ್ರಭಾರಿ ರಘುಚಂದನ್, ಉಪಾಧ್ಯಕ್ಷ ಡಾ.ಸಿದ್ಧಾರ್ಥ, ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಯಾದವ್, ಮಾಧುರಿ ಗೀರೀಶ್, ಮೋಹನ್ ಕುಮಾರ್, ಕಾಡುಗೊಲ್ಲ ಸಂಘದ ರಾಜ್ಯಧ್ಯಕ್ಷ ರಾಜಣ್ಣ, ರಾಮದಾಸ್, ನಗರಾಧ್ಯಕ್ಷ ಲೋಕೇಶ್ ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಮಾಜಿ ಅಧ್ಯಕ್ಷ ಟಿ.ಜಿ.ನರೇಂದ್ರನಾಥ್, ಪಕ್ಷದ ಮುಖಂಡರಾದ ಎನ್.ಆರ್.ಲಕ್ಷ್ಮೀಕಾಂತ, ರಾಜಣ್ಣ, ಅನಿಲ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.



