ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರ ಬಳಿ ಇಂದು ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಕಿಡ್ಸ್ ಇಂಟರ್‌ನ್ಯಾಷನಲ್ ಶಾಲೆಗೆ ಸೇರಿದ ಬಸ್ ಹರಿದು 4 ವರ್ಷದ ಕಂದಮ್ಮ ತಾಯಿಯ ಕಣ್ಣೆದುರೇ ದಾರುಣವಾಗಿ ಮೃತಪಟ್ಟಿದ್ದಾಳೆ.
ಘಟನೆಯ ವಿವರ:
ಲಕ್ಕೇನಹಳ್ಳಿ ಗೇಟ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಶಾಲಾ ಬಸ್ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯೇ ಈ ದುರಂತಕ್ಕೆ ನೇರ ಕಾರಣ ಎನ್ನಲಾಗಿದೆ. ವಾಹನ ಚಲಾಯಿಸುವಾಗ ಚಾಲಕ ತೋರಿದ ಬೇಜವಾಬ್ದಾರಿತನದಿಂದಾಗಿ ಪುಟ್ಟ ಮಗು ಬಸ್ಸಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಉಸಿರು ಚೆಲ್ಲಿದೆ. ಕಣ್ಣ ಮುಂದೆಯೇ ಮಗು ಪ್ರಾಣ ಬಿಟ್ಟಿದ್ದನ್ನು ಕಂಡು ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳದಲ್ಲಿ ಉದ್ವಿಗ್ನ ವಾತಾವರಣ – ಚಾಲಕ ಎಸ್ಕೇಪ್!
ಅಪಘಾತ ಸಂಭವಿಸುತ್ತಿದ್ದಂತೆ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಹೆದರಿದ ಕಿಡ್ಸ್ ಇಂಟರ್‌ನ್ಯಾಷನಲ್ ಶಾಲಾ ಬಸ್ ಚಾಲಕ, ವಾಹನವನ್ನು ರಸ್ತೆಯಲ್ಲೇ ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಸದ್ಯ ತಲೆಮರೆಸಿಕೊಂಡಿರುವ ಚಾಲಕನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಇದನ್ನೂ ಓದಿ:
ಶವಾಗಾರಕ್ಕೆ ಮೃತದೇಹ ರವಾನೆ:
ಮಗುವನ್ನು ಕಳೆದುಕೊಂಡು ಇಡೀ ಕುಟುಂಬ ಸದ್ಯ ತೀವ್ರ ಶೋಕ ಸಾಗರದಲ್ಲಿ ಮುಳುಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸಾರ್ವಜನಿಕರನ್ನು ಸಮಾಧಾನಪಡಿಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸದ್ಯ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.



