ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸದ್ಯ ಮಳೆಯ ತೀವ್ರತೆ ತುಸು ಕಡಿಮೆಯಾಗಿದ್ದರೂ, ಮುಂದಿನ ಕೆಲವು ದಿನಗಳ ಕಾಲ ವರ್ಷಧಾರೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಬಿರುಸಿನ ಗಾಳಿ-ಮಳೆ ಮುಂದುವರಿಯಲಿದೆ.
ಬೆಂಗಳೂರು ಸೇರಿ ಬಯಲುಸೀಮೆಯಲ್ಲೂ ಮಳೆ
ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇವುಗಳಲ್ಲದೆ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಪ್ರಮುಖ ಸೂಚನೆ: ಭೂಕುಸಿತದ ಮುನ್ನೆಚ್ಚರಿಕೆ!
ಜುಲೈ 9 ರಿಂದ 12 ರ ಅವಧಿಯಲ್ಲಿ ರಾಜ್ಯದ ಘಟ್ಟ ಪ್ರದೇಶಗಳ ಒಂದು ಅಥವಾ ಎರಡು ಕಡೆಗಳಲ್ಲಿ ಭೂಕುಸಿತ ಉಂಟಾಗುವ ಸಂಭವವಿದೆ. ಆದ್ದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.



