ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಸೃಷ್ಟಿಯಾಗಿದ್ದ ಮಳೆಯ ಅಬ್ಬರ ಇಳಿಕೆಯಾಗುವ ಮುನ್ಸೂಚನೆ ಸಿಕ್ಕಿದೆ. ಪಶ್ಚಿಮ ಘಟ್ಟ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ತಗ್ಗಲಿದ್ದು, ಕೇವಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರೆಯಲಿದ್ದು, ಬಿಸಿಲಿನ ತಾಪಮಾನ ಏರಿಕೆಯಾಗಲಿದೆ ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡು:
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕೆಲವು ದಿನಗಳ ಕಾಲ ಇದ್ದ ಭಾರಿ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದೆ.
ಉತ್ತರ ಒಳನಾಡು:
ಬೆಳಗಾವಿ, ಧಾರವಾಡ, ಗದಗ, ಹಾವೇರಿ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಸಂಪೂರ್ಣ ಕ್ಷೀಣಿಸಲಿದ್ದು, ಒಣ ಹವೆ ಮತ್ತು ಬಿಸಿಲಿನ ವಾತಾವರಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ಹಾಗೂ ಬೆಂಗಳೂರು:
ಬೆಂಗಳೂರು ನಗರ, ಗ್ರಾಮಾಂತರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಆಗೊಮ್ಮೆ ಈಗೊಮ್ಮೆ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆ ಇದೆ.



