September 2, 2026
Wednesday, September 2, 2026
spot_img

ಘೋರ ದುರಂತ: ಮನೆ ದುರಸ್ತಿ ವೇಳೆ ಮೇಲ್ಚಾವಣಿ ಕುಸಿದು ಇಬ್ಬರು ಕಾರ್ಮಿಕರು ದಾರುಣ ಸಾ*ವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಳಗಾವಿ ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿಗಳ ವೇಳೆ ಸಂಭವಿಸುವ ಅವಘಡಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಮತ್ತೊಂದು ದಾರುಣ ಘಟನೆ ನಡೆದಿದೆ. ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ಹಳೆಯ ಮನೆಯೊಂದರ ಮೇಲ್ಚಾವಣಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದಿದೆ. ಈ ವೇಳೆ ಇಬ್ಬರು ಕಾರ್ಮಿಕರು ಮಣ್ಣಿನ ಅವಶೇಷಗಳ ಅಡಿಯಲ್ಲಿ ಸಿಲುಕಿ ಕೊನೆಯುಸಿರೆಳೆದಿದ್ದಾರೆ.

ಇಬ್ಬರು ದಾರುಣ ಸಾವು

ಮೃತರನ್ನು 32 ವರ್ಷದ ಮಾದೇವ ಬಡಿಗೇರ ಹಾಗೂ ಸೈಯದ್ ಕೆಂಪವಾಡೆ ಎಂದು ಗುರುತಿಸಲಾಗಿದೆ. ಇವರಿಬ್ಬರು ಕಟ್ಟಡ ಕೆಲಸ ಮಾಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಮೇಲ್ಚಾವಣಿ ಕುಸಿದ ತಕ್ಷಣ ಇಬ್ಬರೂ ಕಾರ್ಮಿಕರು ಭಾರಿ ಪ್ರಮಾಣದ ಮಣ್ಣಿನಡಿ ಸಿಲುಕಿಕೊಂಡಿದ್ದರು. ಸ್ಥಳೀಯರು ಸತತ ಒಂದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಮಣ್ಣನ್ನು ಸರಿಸಿ ಇಬ್ಬರನ್ನೂ ಹೊರತೆಗೆದಿದ್ದಾರೆ. ತಕ್ಷಣವೇ ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ, ಅಷ್ಟರಲ್ಲಾಗಲೇ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ:

ಐಗಳಿ ಪೊಲೀಸರಿಂದ ಪರಿಶೀಲನೆ, ಪ್ರಕರಣ ದಾಖಲು

ಘಟನೆ ನಡೆದ ತಕ್ಷಣವೇ ಐಗಳಿ ಪೊಲೀಸ್ ಠಾಣೆಯ ಸಿಬ್ಬಂದಿ ಕೊಟ್ಟಲಗಿ ಗ್ರಾಮದ ದುರಂತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಇಬ್ಬರು ಕಾರ್ಮಿಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಭೀಕರ ಅವಘಡದ ಕುರಿತು ಐಗಳಿ ಪೊಲೀಸ್ ಠಾಣೆಯಲ್ಲಿ ಅಧಿಕೃತ ಪ್ರಕರಣ ದಾಖಲಾಗಿದೆ. ಹಳೆಯ ಕಟ್ಟಡಗಳ ನವೀಕರಣದ ವೇಳೆ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಈ ದುರಂತ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !