ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವು ಮೃತದೇಹಗಳನ್ನು ಹೂತಿಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ತನಿಖಾ ವರದಿಯನ್ನು ಬುಧವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದೆ.
ಮಧ್ಯಾಹ್ನ ನ್ಯಾಯಾಲಯಕ್ಕೆ ಆಗಮಿಸಿದ ಎಸ್‌ಐಟಿ ಅಧಿಕಾರಿಗಳು ತನಿಖೆಯ ವರದಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಸುಮಾರು 7 ಸಾವಿರಕ್ಕೂ ಅಧಿಕ ಪುಟಗಳ ಈ ಅಂತಿಮ ವರದಿ ಜೊತೆಗೆ ದಾಖಲೆಗಳು, ಸಾಕ್ಷ್ಯಗಳು ಹಾಗೂ ವಿಡಿಯೊ ದಾಖಲಾತಿಗಳನ್ನು ಒಳಗೊಂಡ ಹಾರ್ಡ್‌ಡಿಸ್ಕ್‌ನ್ನೂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆದರೆ ಎಸ್ ಐಟಿ ಇದನ್ನು ಖಚಿತಪಡಿಸಿಲ್ಲ.
ತನಿಖೆಯ ಅವಧಿಯಲ್ಲಿ ಎಸ್‌ಐಟಿ 255 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದು, ಮಾನವ ಅಸ್ಥಿ ಅವಶೇಷಗಳು, ಮೊಬೈಲ್ ಫೋನ್‌ಗಳು, ದಾಖಲೆಗಳು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ಪರೀಕ್ಷೆಗೆ ಕಳುಹಿಸಿ ಮರಳಿದ ವಸ್ತುಗಳನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:
ಈ ಪ್ರಕರಣದ ದೂರುದಾರ ಚಿನ್ನಯ್ಯ ಕೂಡ ತಮ್ಮ ಪತ್ನಿಯೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆದರೆ, ಅವರ ವಿಚಾರಣೆಯನ್ನು ನ್ಯಾಯಾಲಯ ಆ.29ಕ್ಕೆ ಮುಂದೂಡಿದೆ ಎಂದು ತಿಳಿದುಬಂದಿದೆ. ಎಸ್‌ಐಟಿ ಸಲ್ಲಿಸಿರುವ ವರದಿಯ ಪರಿಶೀಲನೆಯ ಬಳಿಕ ಪ್ರಕರಣದಲ್ಲಿ ಮುಂದಿನ ಕಾನೂನು ಪ್ರಕ್ರಿಯೆ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ನ್ಯಾಯಾಲಯ ನಿರ್ಧರಿಸಲಿದೆ.



