ಹೊಸದಿಗಂತ ವರದಿ ಬೆಳಗಾವಿ
ಬೆಳಗಾವಿ: ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ದಲಿತ ಸಮುದಾಯ ಹಾಗೂ ಮಹಿಳೆಯರ ಬಗ್ಗೆ ಅವಹೇಳನಕಾರಿ ಮತ್ತು ಅವಾಚ್ಯ ಪದಗಳನ್ನು ಬಳಸಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೆಳಗಾವಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕರಿಗೆ ‘ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ’ ಸಂಘಟನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಪ್ರವೀಣ್ ಆರ್. ಮಾದರ್ ಬುಧವಾರ ಪೊಲೀಸ್ ಅಧೀಕ್ಷಕರಿಗೆ ಅಧಿಕೃತ ದೂರು ಸಲ್ಲಿಸಿದರು.
ದೂರಿನ ಪ್ರಕಾರ, ‘Mahadevwaghroastar’ ಹೆಸರಿನ ಫೇಸ್ಬುಕ್ ಖಾತೆಯಿಂದ ಹಂಚಿಕೊಳ್ಳಲಾದ ವಿಡಿಯೋದಲ್ಲಿ ದಲಿತ ಸಮುದಾಯವನ್ನು ಅವಹೇಳನ ಮಾಡುವ ರೀತಿಯ ಪದಗಳನ್ನು ಬಳಸಲಾಗಿದೆ. ಅಲ್ಲದೆ, ಮಹಿಳೆಯರ ವಿರುದ್ಧವೂ ಅವಾಚ್ಯ ಹಾಗೂ ಅವಹೇಳನಕಾರಿ ಪದಗಳನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ರೀತಿಯ ಪೋಸ್ಟ್ಗಳು ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವುದರ ಜೊತೆಗೆ ಮಹಿಳೆಯರ ಗೌರವಕ್ಕೂ ಅವಮಾನ ಉಂಟುಮಾಡುವಂತಿವೆ. ಸಮಾಜದಲ್ಲಿ ದ್ವೇಷ ಮತ್ತು ಅಶಾಂತಿ ಸೃಷ್ಟಿಸುವ ಇಂತಹ ಕೃತ್ಯಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಘಟನೆಯ ಮುಖಂಡರು ಆಗ್ರಹಿಸಿದರು.
ಮಹಿಳೆಯರ ವಿರುದ್ಧದ ಅವಹೇಳನಕಾರಿ ಹೇಳಿಕೆಗಳಿಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ದಲಿತ ಸಮುದಾಯವನ್ನು ಸಾರ್ವಜನಿಕವಾಗಿ ಅವಮಾನಿಸಿರುವ ಆರೋಪದ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ–1989ರಡಿ ಪ್ರಕರಣ ದಾಖಲಿಸಿ, ಸಂಬಂಧಿತ ಫೇಸ್ಬುಕ್ ಖಾತೆದಾರರನ್ನು ಪತ್ತೆ ಹಚ್ಚಿ ಬಂಧಿಸಬೇಕೆಂದು ಒತ್ತಾಯಿಸಿದರು.
ಇದನ್ನೂ ಓದಿ:
ಈ ವೇಳೆ ರಾಜ್ಯ ಉಪಾಧ್ಯಕ್ಷ ಅಕ್ಷಯ ಕೆ.ಆರ್., ಬೆಳಗಾವಿ ಜಿಲ್ಲಾ ಅಧ್ಯಕ್ಷ ಸಚೀನ ಕೋಲಕಾರ, ಜಿಲ್ಲಾ ಉಪಾಧ್ಯಕ್ಷ ಆಕಾಶ ಕಾಂಬಳೆ, ದಲಿತ ಮುಖಂಡ ಮಲ್ಲಪ್ಪ ಅಕ್ಕಮಡ್ಡಿ ಸೇರಿದಂತೆ ಹಲವರು ದಲಿತ ಸಂಘಟನೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.



