ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಅತ್ಯಾಚಾರಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ಕು ವರ್ಷದ ಬಾಲಕಿಗೆ ತಕ್ಷಣ ಚಿಕಿತ್ಸೆ ನೀಡಲು ವಿಫಲವಾದ ಎರಡು ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯರ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.
‘ವೈದ್ಯರೆಂದರೆ ಮಾನವೀಯತೆ ಇರಬೇಕು’
ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, “ರೋಗಿಯ ಜೀವ ಉಳಿಸುವ ಕರ್ತವ್ಯ ನಿಭಾಯಿಸದಿದ್ದರೆ ವೈದ್ಯರೆಂದು ಕರೆಯಿಸಿಕೊಳ್ಳುವ ಹಕ್ಕೇ ಇಲ್ಲ. ಚಿಕಿತ್ಸೆ ಸೌಲಭ್ಯ ಇಲ್ಲದಿದ್ದರೂ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಿತ್ತು” ಎಂದು ಆಸ್ಪತ್ರೆಗಳ ನಡೆಗೆ ತೀವ್ರ ತರಾಟೆ ತೆಗೆದುಕೊಂಡರು.
ಇದನ್ನೂ ಓದಿ:
ಚಿಕಿತ್ಸೆ ಸಿಗದೇ ಬಾಲಕಿ ಸಾವು
ಮಾರ್ಚ್‌ನಲ್ಲಿ ನಾಲ್ಕು ವರ್ಷದ ಬಾಲಕಿಯನ್ನು ನೆರೆಮನೆಯ ವ್ಯಕ್ತಿಯೊಬ್ಬ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ಬಿಟ್ಟುಹೋಗಿದ್ದ ಎನ್ನಲಾಗಿದೆ. ಕುಟುಂಬಸ್ಥರು ಎರಡು ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ದರೂ ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿ ವೈದ್ಯರು ಬಾಲಕಿ ಮೃತಪಟ್ಟಿರುವುದಾಗಿ ಘೋಷಿಸಿದ್ದರು.
ತನಿಖೆ ಮುಂದುವರಿಕೆ
ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವಲ್ಲಿಯೂ ಪೊಲೀಸ್ ಇಲಾಖೆ ನಿರ್ಲಕ್ಷ್ಯ ತೋರಿದೆ ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಸಂತ್ರಸ್ತೆಯ ತಂದೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮುಂದುವರಿದಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಮುಂದಿನ ವಾರಕ್ಕೆ ನಿಗದಿಪಡಿಸಿದೆ.



