ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಗಣಿಸಿ ಜುಲೈ 18ರ ಶನಿವಾರದಂದು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕೃತ ಪ್ರಕಟಣೆಯ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 18ರಂದು ರಜೆ ಘೋಷಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿ ತರಗತಿ ನಡೆಸಿದರೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ಇದನ್ನೂ ಓದಿ:
ನೀರು ಹರಿಯುವ ತಗ್ಗು ಪ್ರದೇಶಗಳು, ಕೆರೆ, ನದಿ ತೀರ ಹಾಗೂ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಕಟ್ಟುನಿಟ್ಟಿನ ಜಾಗ್ರತೆ ವಹಿಸಬೇಕು. ಸಮುದ್ರದಲ್ಲಿ ಭಾರಿ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು. ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ತೀರ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.



