ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮಾರಪ್ಪನಪಾಳ್ಯದಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ ಮೃತಪಟ್ಟು ಮೂರು ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
20 ವರ್ಷದ ಉದಯ್ ಮೃತ ವಿದ್ಯಾರ್ಥಿ. ಕೆಸಿ ಜನರಲ್ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ. ಓದಿನ ಜೊತೆಗೆ ಬಾಟಾ ಶೋರೂಂನಲ್ಲಿ ಪಾರ್ಟ್ ಟೈಮ್ ಕೆಲಸ ಮಾಡುತ್ತಿದ್ದ. ಉದಯ್‌ಗಾಗಿ ಪೋಷಕರು ಮನೆಯ ಮಹಡಿ ಮೇಲೆ ಸಪರೇಟ್ ರೂಮ್ ಮಾಡಿ ಕೊಟ್ಟಿದ್ದರು.
ಅದೇ ರೂಮ್‌ನಲ್ಲಿ ಉದಯ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದರೆ ಮೂರು ದಿನಗಳವರೆಗೂ ಉದಯ್ ಆತ್ಮಹತ್ಯೆಗೆ ಶರಣಾಗಿದ್ದು ಯಾರಿಗೂ ಗೊತ್ತಾಗಿಲ್ಲ. ಬಳಿಕ ದುರ್ವಾಸನೆ ಬರುತ್ತಿದ್ದುದನ್ನು ಗಮನಿಸಿದ ಕುಟುಂಬಸ್ಥರು ಕೊಠಡಿ ಪರಿಶೀಲಿಸಿದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಉದಯ್ ಆನ್‌ಲೈನ್ ಗೇಮಿಂಗ್ ಚಟಕ್ಕೆ ಒಳಗಾಗಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತನಿಖೆಯ ಬಳಿಕವೇ ತಿಳಿಯಬೇಕಿದೆ.
ಮಾಹಿತಿ ತಿಳಿದ ತಕ್ಷಣ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ನೆಲಮಂಗಲ ಶವಗಾರಕ್ಕೆ ರವಾನಿಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.



