ಹೊಸದಿಗಂತ ವರದಿ ಬೆಳಗಾವಿ;
ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್ ಯಾರಿಗೆ ಸಚಿವ ಸ್ಥಾನ ನೀಡಿದರೂ ಅವರು ನಮ್ಮವರೇ ಆಗಿದ್ದು, ಬೆಳಗಾವಿ ಜಿಲ್ಲೆಯ ಮೂವರು ನಾಯಕರ ಹೆಸರುಗಳು ಚರ್ಚೆಯಲ್ಲಿವೆ. ಅವರಲ್ಲಿ ಯಾರಿಗೆ ಅವಕಾಶ ದೊರೆತರೂ ಜಿಲ್ಲೆಗೆ ಅನುಕೂಲವಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯ ಅಂತಿಮ ನಿರ್ಧಾರ ಹೈಕಮಾಂಡ್ ಕೈಯಲ್ಲಿದ್ದು, ಬೆಳಗಾವಿ ಜಿಲ್ಲೆಗೆ ಒಂದು ಸಚಿವ ಸ್ಥಾನ ದೊರೆಯುವ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು ನಗರ ದೊಡ್ಡ ಪ್ರದೇಶವಾಗಿರುವುದರಿಂದ ಅಲ್ಲಿನ ಮುಸ್ಲಿಂ ಸಮುದಾಯಕ್ಕೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. ಬೆಳಗಾವಿ ಭಾಗದ ಮುಸ್ಲಿಂ ಸಮುದಾಯಕ್ಕೂ ಅವಕಾಶ ದೊರೆಯುತ್ತದೆಯೇ ಎಂಬುದು ಹೈಕಮಾಂಡ್ನ ಅಂತಿಮ ತೀರ್ಮಾನದ ಮೇಲೆ ಅವಲಂಬಿತವಾಗಿದೆ. ಇದಕ್ಕಾಗಿ ಕಾದು ನೋಡಬೇಕಿದೆ ಎಂದು ಹೇಳಿದರು.
ಹಿರಿಯ ನಾಯಕರ ಅನುಭವ, ಪ್ರಾದೇಶಿಕ ಸಮತೋಲನ ಸೇರಿದಂತೆ ವಿವಿಧ ಅಂಶಗಳನ್ನು ಪರಿಗಣಿಸಿ ಸಚಿವ ಸ್ಥಾನಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಡ್ರಗ್ಸ್ ವಿರುದ್ಧ ಗ್ರಾಮೀಣ ಪ್ರದೇಶದಲ್ಲೂ ಜಾಗೃತಿ:
ರಾಜ್ಯದಲ್ಲಿ ಡ್ರಗ್ಸ್ ಹಾವಳಿ ತಡೆಯಲು ನಗರ ಪ್ರದೇಶಗಳಷ್ಟೇ ಅಲ್ಲದೆ ಗ್ರಾಮೀಣ ಭಾಗಗಳಲ್ಲಿಯೂ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು. ವ್ಯಸನಮುಕ್ತ ಕರ್ನಾಟಕ ನಿರ್ಮಾಣದ ಉದ್ದೇಶದಿಂದ ಸರ್ಕಾರ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು.
ವಿದೇಶಗಳಿಂದ ಅಕ್ರಮವಾಗಿ ಡ್ರಗ್ಸ್ ಪೂರೈಕೆಯಾಗುತ್ತಿದ್ದು, ರಾಜಸ್ಥಾನ ಹಾಗೂ ಪಂಜಾಬ್ ರಾಜ್ಯಗಳಲ್ಲಿ ದೊಡ್ಡ ಜಾಲ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಮಾರ್ಗವಾಗಿ ಕೇರಳಕ್ಕೆ ಡ್ರಗ್ಸ್ ಸಾಗಾಟವಾಗುತ್ತಿರುವ ಮಾಹಿತಿ ಲಭ್ಯವಾಗಿದ್ದು, ಅಕ್ರಮ ಸಾಗಾಟದ ವೇಳೆ ರಾಜ್ಯದಲ್ಲಿ ಹಲವು ಬಾರಿ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಹೇಳಿದರು.
ನೀಟ್ ಪ್ರತಿಭಟನೆಗೆ ಕೇಂದ್ರ ಸ್ಪಂದಿಸಲಿ: ನೀಟ್ ಅಕ್ರಮ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಸಚಿವರು, ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕು. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಪ್ರತಿಭಟನೆಯಲ್ಲಿ ಭಾಗವಹಿಸಿರುವವರು ವಿದ್ಯಾರ್ಥಿಗಳೇ ಹೊರತು ರಾಜಕೀಯ ನಾಯಕರು ಅಲ್ಲ. ಅವರ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.
ಇದನ್ನೂ ಓದಿ:
ಬರ ಪರಿಸ್ಥಿತಿ ಕುರಿತು ಸಮೀಕ್ಷೆ:
ರಾಜ್ಯದ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳಿಗೆ ಸಮಗ್ರ ಸಮೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ಅದನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಬರ ಘೋಷಣೆಗೆ ಕೇಂದ್ರ ಸರ್ಕಾರದ ಅನುಮೋದನೆ ಅಗತ್ಯವಾಗಿದೆ ಎಂದು ಸಚಿವರು ತಿಳಿಸಿದರು. ಭಾನುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ನಿರ್ದೇಶನಗಳನ್ನು ನೀಡಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಈ ವೇಳೆ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ಮಹಮ್ಮದ್ ರೋಷನ್, ಇದ್ದರು.



