ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಇನ್ನೆರಡು ದಿನ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲೂ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.
ಇಂದು (ಜುಲೈ 22) ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅನೇಕ ಕಡೆ ಮಳೆಯೊಂದಿಗೆ ಬಲವಾದ ಗಾಳಿ ಬೀಸಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.



