ಹೊಸದಿಗಂತ ಡಿಜಿಟಲ್ ಡೆಸ್ಕ್
ದೇಶದ ಯುವಜನತೆಯ ಹಿತರಕ್ಷಣೆ ಮತ್ತು ಅವರ ಭವಿಷ್ಯವನ್ನು ಕಾಯುವುದು ನಮ್ಮ ಸರ್ಕಾರದ ಅತ್ಯುನ್ನತ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಯಾವುದೇ ತಪ್ಪಿತಸ್ಥರು ಕಠಿಣ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.
ನೀಟ್ ಪ್ರತಿಭಟನೆಯ ನಡುವೆ ಪ್ರಧಾನಿ ಮಹತ್ವದ ನಿರ್ಧಾರ
ದೇಶಾದ್ಯಂತ ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್’ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ವಿದ್ಯಾರ್ಥಿಗಳು ಸರಣಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ತೀವ್ರ ಒತ್ತಾಯ ಕೇಳಿಬರುತ್ತಿದೆ. ಈ ಭಾರಿ ರಾಜಕೀಯ ಹಾಗೂ ಸಾಮಾಜಿಕ ಆಕ್ರೋಶದ ಬೆನ್ನಲ್ಲೇ ಪ್ರಧಾನಿ ಮೋದಿ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಇದನ್ನೂ ಓದಿ:
ತ್ವರಿತ ನ್ಯಾಯಕ್ಕಾಗಿ ವಿಶೇಷ ನ್ಯಾಯಾಲಯ
ಪೇಪರ್ ಲೀಕ್ ಪ್ರಕರಣಗಳ ವಿಚಾರಣೆಯನ್ನು ಅತ್ಯಂತ ವೇಗವಾಗಿ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ‘ಫಾಸ್ಟ್ ಟ್ರ್ಯಾಕ್ ಕೋರ್ಟ್ಗಳನ್ನು’ ಸ್ಥಾಪಿಸಲು ನಿರ್ಧರಿಸಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ (X) ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ನಮ್ಮ ಯುವ ಪೀಳಿಗೆಯ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ನಮಗೆ ಬೇರೆ ಯಾವುದೇ ವಿಷಯ ಮುಖ್ಯವಲ್ಲ! ನಮ್ಮ ಯುವಕರ ಭವಿಷ್ಯಕ್ಕೆ ಧಕ್ಕೆ ತರಲು ಯತ್ನಿಸುವ ಯಾರನ್ನೂ ಸುಮ್ಮನೆ ಬಿಡುವುದಿಲ್ಲ” ಎಂದು ಕಟುವಾಗಿ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆಗಳಿಗೆ ನಿರ್ದೇಶನ ನೀಡಿರುವುದಾಗಿ ಅವರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಿತ ಕಾಯಲು ಸರ್ಕಾರ ತೆಗೆದುಕೊಳ್ಳುತ್ತಿರುವ ಸರಣಿ ಮುನ್ನೆಚ್ಚರಿಕೆ ಕ್ರಮಗಳ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.



