ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆ, ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ನಾಯಕರುಗಳ ನೇತ್ರತ್ವದಲ್ಲಿ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನಾಕಾರರು ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಹಾಕಲು ಮುಂದಾದ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ತಡೆದರು.
ನಗರದ ರಾಣಿ ಚೆನ್ನಮ್ಮ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ರ್ಯಾ ಲಿ ಕಾಂಗ್ರೆಸ್ ಭವನದತ್ತ ಸಾಗಿತು. ಮುನ್ನೆಚ್ಚರಿಕಾ ಕ್ರಮವಾಗಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಕಾಂಗ್ರೆಸ್ ಭವನದ ಸಮೀಪ ಪ್ರತಿಭಟನಾಕಾರರನ್ನು ಪೊಲೀಸರು ತಡೆದು ಪರಿಸ್ಥಿತಿಯನ್ನು ನಿಯಂತ್ರಿಸಿದರು. ಈ ವೇಳೆ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಷ್ ಪಾಟೀಲ, ರಾಜ್ಯ ಸರ್ಕಾರ ವಿರೋಧ ಪಕ್ಷದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ವಿರುದ್ಧ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ಶಾಸಕರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಮೇಲೆ ಮೊಟ್ಟೆ ಎಸೆದು ಹಲ್ಲೆ ನಡೆಸುತ್ತಿರುವ ಘಟನೆಗಳನ್ನು ತೀವ್ರವಾಗಿ ಖಂಡಿಸಿದರು.
ಕಾಂಗ್ರೆಸ್ ಪಕ್ಷವು ದೇಶವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸಿ ರಾಜಕೀಯ ಸ್ವಾರ್ಥಕ್ಕಾಗಿ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಎದುರು ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಟೀಕಿಸಿದರು.
ಬಳಿಕ ಕಾಂಗ್ರೆಸ್ ನ ದಬ್ಬಳಿಕೆಯ ವಿಚಾರವಾಗಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಮಾಡಿಕೊಂಡರು.
ಇದನ್ನೂ ಓದಿ:
ಈ ಸಂದರ್ಭದಲ್ಲಿಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಶಾಸಕ ವಿಠ್ಠಲ ಹಲಗೇಕರ, ಹಾಗೂ ಮಾಜಿ ಶಾಸಕರಾದ ಸಂಜಯ ಪಾಟೀಲ, ಎಂಎಲ್ ಸಿ ಮಹಾಂತೇಶ ಕವಟಗಿಮಠ ಸೇರಿದಂತೆ ಹಲವು ಬಿಜೆಪಿಯ ನಾಯಕರುಗಳು ಕಾಂಗ್ರೆಸ್ ವಿರುದ್ದ ಅಸಮಾಧಾನ ಹೋರ ಹಾಕಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ವೇಳೆ ಬಿಜೆಪಿ ಮಹಾನಗರ ಅಧ್ಯಕ್ಷೆ ಗೀತಾ ಸುತಾರ, ಮಾಜಿ ಶಾಸಕ ಅನಿಲ ಬೆನಕೆ, ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡ್ರ, ವಿಶ್ವನಾಥ ಪಾಟೀಲ, ಅರವಿಂದ ಪಾಟೀಲ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.



