ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಜುಲೈ 28 ಮತ್ತು 29ರಂದು ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್:
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಗಾಳಿ ಸಹಿತ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಕರಾವಳಿಯ ಮೂರೂ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಮುನ್ನೆಚ್ಚರಿಕೆ ನೀಡಿದೆ. ಕಡಲ ತೀರದಲ್ಲಿ ಗಂಟೆಗೆ 30 ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.
ಮಲೆನಾಡು, ಒಳನಾಡಿನಲ್ಲೂ ವರುಣನ ಅಬ್ಬರ:
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಘಾಟ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಆತಂಕವಿದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲೂ ಮಳೆ ಬಿರುಸುಗೊಳ್ಳಲಿದೆ. ಇನ್ನು,ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಅದೇ ರೀತಿಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



