ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಬಹುದು ಎಂದು ಹೇಳಿರುವುದನ್ನು ಚುನಾವಣಾ ರಾಜಕೀಯದಿಂದ ನಿವೃತ್ತಿ ಎಂದು ಅರ್ಥೈಸಬಾರದು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಸಚಿವರಾದ ಬಳಿಕ ಬೆಳಗಾವಿಗೆ ಮೊದಲ ಭಾರಿ ಆಗಮಿಸಿದ ಅವರು, ಮಂಗಳವಾರ ನಗರದ ಸರ್ಕಿಟ್ ಸೌಟ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯನವರು ಮುಂದಿನ ಚುನಾವಣೆಗೆ ಸ್ಪರ್ಧಿಸದೇ ಇರಬಹುದು. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ದುರ್ಬಲರು ಹಾಗೂ ಶೋಷಿತರ ಪರವಾಗಿ ಧ್ವನಿ ಎತ್ತುವ ಕೆಲಸವನ್ನು ಮುಂದುವರಿಸಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಅವರು ಖಂಡಿತವಾಗಿ ಪ್ರಚಾರ ನಡೆಸಲಿದ್ದಾರೆ,” ಎಂದು ಹೇಳಿದರು.
ಸಂಪುಟ ವಿಸ್ತರಣೆ ಮತ್ತು ನಗರಾಭಿವೃದ್ಧಿ ಪರಿಶೀಲನೆ:
ಸಂಪುಟ ವಿಸ್ತರಣೆಯ ಕುರಿತು ಪ್ರತಿಕ್ರಿಯಿಸಿದ ಅವರು, “ಹೈಕಮಾಂಡ್ ಮುಖ್ಯಮಂತ್ರಿಯವರನ್ನು ದೆಹಲಿಗೆ ಕರೆದಿದ್ದು, ಚರ್ಚೆಯ ನಂತರ ಸೂಕ್ತ ತೀರ್ಮಾನ ಕೈಗೊಂಡು ಸಂಪುಟ ವಿಸ್ತರಣೆ ಮಾಡಲಾಗುವುದು,” ಎಂದರು. ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ಬೆಳಗಾವಿಗೆ ಆಗಮಿಸಿದ್ದು, ಮಹಾನಗರ ಪಾಲಿಕೆ ಹಾಗೂ ಬೆಳಗಾವಿ ನಗರಾಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು.
ಇದನ್ನೂ ಓದಿ:
ಅನುದಾನ ಹಾಗೂ ರಸ್ತೆ ದುರಸ್ತಿ:
ಬೆಳಗಾವಿ ಮಹಾನಗರ ಪಾಲಿಕೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಸ್ಥಗಿತಗೊಂಡಿರುವ ಕುರಿತು ಕೇಳಿದ ಪ್ರಶ್ನೆಗೆ, ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಪರಿಶೀಲಿಸುವುದಾಗಿ ತಿಳಿಸಿದ ಅವರು, ಚುನಾಯಿತ ಪ್ರತಿನಿಧಿಗಳ ಆಡಳಿತವಿಲ್ಲದ ಸ್ಥಳಗಳಿಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅನುದಾನ ಬರುತ್ತದೆ ಎಂದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ಎಲ್ ಆಂಡ್ ಟಿ ಕಂಪನಿಯು 24×7 ಕುಡಿಯುವ ನೀರಿನ ಯೋಜನೆಗಾಗಿ ರಸ್ತೆಗಳನ್ನು ಅಗೆದು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, “ರಸ್ತೆಗಳನ್ನು ಅಗೆದವರೇ ಅವುಗಳನ್ನು ಸಮರ್ಪಕವಾಗಿ ದುರಸ್ತಿ ಮಾಡಬೇಕು. ಈ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಲಾಗುವುದು,” ಎಂದು ಭರವಸೆ ನೀಡಿದರು. ಅಲ್ಲದೆ, ಜಿಲ್ಲೆಯ ಅಗತ್ಯಗಳನ್ನು ಪರಿಶೀಲಿಸಿ ರಾಜ್ಯ ಸರ್ಕಾರದಿಂದ ಅಗತ್ಯ ಅಭಿವೃದ್ಧಿ ನೆರವು ದೊರಕಿಸಲು ಶ್ರಮಿಸುವುದಾಗಿ ತಿಳಿಸಿದರು.



