ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ವಿವಿಧ ಜಿಲ್ಲೆಗಳ ವಸತಿ ಶಾಲೆಗಳಲ್ಲಿ ಗುಣಮಟ್ಟವಿಲ್ಲದ ಆಹಾರ ಸೇವಿಸಿ ಒಂದೇ ದಿನ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿಯಲ್ಲಿ 30 ಹಾಗೂ ರಾಯಚೂರು ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು ಮಕ್ಕಳು ಫುಡ್ ಪಾಯ್ಸನ್ ಕಾರಣದಿಂದ ಆಸ್ಪತ್ರೆ ಸೇರಿದ್ದಾರೆ.
ಹುಳ ಬಿದ್ದಿದ್ದ ಆಹಾರ ನೀಡಿದ ಆರೋಪ:
ರಾಯಚೂರು ಜಿಲ್ಲೆಯ ಸಿಂಧನೂರಿನ ಒಳ ಬಳ್ಳಾರಿ ರಸ್ತೆಯಲ್ಲಿರುವ ಅಲ್ಪಸಂಖ್ಯಾತ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ಬೆನ್ನಲ್ಲೇ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ತೀವ್ರ ಹೊಟ್ಟೆನೋವು ಹಾಗೂ ವಾಂತಿ ಕಾಣಿಸಿಕೊಂಡಿದೆ. ನರಳಾಡುತ್ತಿದ್ದ ಮಕ್ಕಳನ್ನು ತಕ್ಷಣವೇ ಸಿಂಧನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಾಲೆಯ ಹಾಸ್ಟೆಲ್‌ನಲ್ಲಿ ಮಕ್ಕಳಿಗೆ ಹುಳ ಬಿದ್ದಿರುವ ಅಶುಚಿಯಾದ ಆಹಾರವನ್ನೇ ನಿರಂತರವಾಗಿ ನೀಡಲಾಗುತ್ತಿತ್ತು ಎಂದು ಪೋಷಕರು ಮತ್ತು ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ:
ಕಲಬುರಗಿಯಲ್ಲೂ ಮುಂದುವರಿದ ಕಾಯಿಲೆ:
ಇನ್ನೊಂದೆಡೆ ಕಲಬುರಗಿ ಜಿಲ್ಲೆಯಲ್ಲೂ ವಸತಿ ಶಾಲೆಯ ಆಹಾರ ಸೇವಿಸಿದ 30 ಮಕ್ಕಳು ಅಸ್ವಸ್ಥರಾಗಿದ್ದು, ಅವರನ್ನೂ ಸಹ ಸ್ಥಳೀಯ ಆಸ್ಪತ್ರೆಗೆ ಸೇರಿಸಿ ತುರ್ತು ನಿಗಾದಲ್ಲಿ ಇಡಲಾಗಿದೆ. ಸದ್ಯ ಎಲ್ಲ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ರಾಜ್ಯದ ಸರ್ಕಾರಿ ಹಾಗೂ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗುವ ಬಿಸಿಯೂಟದ ಗುಣಮಟ್ಟದ ಕುರಿತು ಸಾರ್ವಜನಿಕ ವಲಯದಲ್ಲಿ ಈಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದಾರೆ.



