July 30, 2026
Thursday, July 30, 2026
spot_img

ಆಧುನಿಕ ಸಮಾಜದ ಕಪ್ಪು ಛಾಯೆ ‘ಮಾನವ ಕಳ್ಳಸಾಕಾಣಿಕೆ’: ಚಿತ್ರದುರ್ಗದಲ್ಲಿ ಪ್ರಧಾನ ಜಿಲ್ಲಾ ನ್ಯಾಯಾಧೀಶರ ಕಳವಳ

ಹೊಸದಿಗಂತ ವರದಿ ಚಿತ್ರದುರ್ಗ

ಆಧುನಿಕ ಸಮಾಜದಲ್ಲಿ ದೇಶವು ಎಷ್ಟೇ ಪ್ರಗತಿ ಸಾಧಿಸಿದರೂ, ಸಮಾಜ ಎಷ್ಟೇ ಮುಂದುವರಿದರೂ ಅದರ ಜೊತೆಗೆ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಮಾನವ ಕಳ್ಳಸಾಕಾಣಿಕೆಯಂತಹ ಕಪ್ಪು ಛಾಯೆ ನಮ್ಮನ್ನು ಕಾಡುತ್ತಲೇ ಇದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಡಿ.ಮಹಾವರ್ಕರ್ ಕಳವಳ ವ್ಯಕ್ತಪಡಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ವತಿಯಿಂದ ನಗರದ ಜಿ.ಪಂ. ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ದಿನಗಳಲ್ಲಿ ಯುವಕರು, ಮಹಿಳೆಯರು ಹಾಗೂ ಸಣ್ಣ ಸಣ್ಣ ಮಕ್ಕಳು ಶೋಷಣೆಗೆ ಒಳಗಾಗುತ್ತಿದ್ದು, ಅವರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಇಂತಹ ಅಪರಾಧಗಳನ್ನು ಹೇಗೆ ಪತ್ತೆ ಹಚ್ಚಬೇಕು, ಇದರಿಂದ ರಕ್ಷಣೆ ಪಡೆಯುವುದು ಹೇಗೆ ಹಾಗೂ ಕಾನೂನಾತ್ಮಕ ಚೌಕಟ್ಟಿನಲ್ಲಿ ಪರಿಹಾರ ಕಂಡುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ವ್ಯಾಪಕ ಚಿಂತನೆ-ಮಂಥನ ನಡೆಯಬೇಕಿದೆ ಎಂದು ಹೇಳಿದರು.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಅರಿವು ಮೂಡಿಸುವ ಮೂಲಕ ಈ ಕಾರ್ಯಕ್ರಮದ ಉದ್ದೇಶವನ್ನು ಯಶಸ್ವಿಗೊಳಿಸಬೇಕು. ಪ್ರತಿಯೊಬ್ಬರೂ ತಮ್ಮ ತಮ್ಮ ಕರ್ತವ್ಯದ ವ್ಯಾಪ್ತಿಯಲ್ಲಿ ಇಂತಹ ಶೋಷಣೆಗಳ ವಿರುದ್ಧ ಜಾಗೃತಿ ಮೂಡಿಸಲು ಶ್ರಮಿಸಬೇಕು ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುಧೀನ್ ಕುಮಾರ್ ಮಾತನಾಡಿ, ಸಾಮಾನ್ಯವಾಗಿ ಆಚರಿಸುವ ಹಬ್ಬ-ಹರಿ ದಿನಗಳು, ಉತ್ಸವಗಳಂತೆ ಮಾನವ ಕಳ್ಳಸಾಕಾಣಿಕೆ ತಡೆ ದಿನಾಚರಣೆಯು ಸಂಭ್ರಮದ ಕಾರ್ಯಕ್ರಮವಲ್ಲ. ಮಹತ್ವದ ಉದ್ದೇಶದಿಂದ ಈ ದಿನ ಆಚರಿಸಲಾಗುತ್ತಿದ್ದು, ಈ ಸಾಮಾಜಿಕ ಪಿಡುಗನ್ನು ತಡೆಯಲು ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಶ್ರಮಿಸಬೇಕಾಗಿದೆ ಎಂದು ಹೇಳಿದರು.

 ಮಕ್ಕಳು ಎಂದರೆ ದೇವರಿಗೆ ಸಮಾನ, ಸ್ತ್ರೀಯರು ದೇವತೆಗಳು ಎಂದು ಬರೀ ಮಾತಿನಲ್ಲಿ ಹೇಳಿ ಸುಮ್ಮನಾದರೆ ಸಾಲದು. ಕೇವಲ ಕಾನೂನು, ಆದೇಶಗಳಿಂದ ಮಾತ್ರವೇ ಈ ಸಮಸ್ಯೆ ತಡೆಯಲು ಸಾಧ್ಯವಿಲ್ಲ. ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದನ್ನು ವೈಯಕ್ತಿಕ ಹೊಣೆಗಾರಿಕೆಯಾಗಿ ಸ್ವೀಕರಿಸಬೇಕು. ಮಕ್ಕಳು ಮತ್ತು ಮಹಿಳೆಯರ ಸುರಕ್ಷತೆಯ ವಿ?ಯ ಬಂದಾಗ ಅತ್ಯಂತ ಜಾಗರೂಕರಾಗಿ, ವೈಯಕ್ತಿಕ ಕಾಳಜಿಯಿಂದ ಕಾರ್ಯನಿರ್ವಹಿಸುವುದು ಅತ್ಯಗತ್ಯ ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ:

ಜಿ.ಪಂ. ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುನಿಲ್ ಕುಮಾರ್ ಮಾತನಾಡಿದರು. ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟುವಿಕೆ ವಿಷಯದ ಕುರಿತು ಹಿರಿಯ ವಕೀಲ ಕೆ.ಎಸ್.ವಿಜಯ್ ಉಪನ್ಯಾಸ ನೀಡಿದರು. ಜಿ.ಪಂ. ಯೋಜನಾ ನಿರ್ದೇಶಕಿ ಜಯಲಕ್ಷ್ಮಮ್ಮ, ಕಾರ್ಮಿಕ ಅಧಿಕಾರಿ ಅನಿಲ್ ಬಾಲಚಂದ್ರ ಬಗಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎ.ಎಂ.ವೀಣಾ ಹಾಜರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !