ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿ ‘ಆರೆಂಜ್ ಅಲರ್ಟ್’ ಘೋಷಿಸಿದೆ.
ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಶಾಲಾ- ಕಾಲೇಜುಗಳಿಗೆ ರಜೆ:
ಮಳೆಯ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯ ಹಲವು ತಾಲೂಕುಗಳಲ್ಲಿ ಇಂದು (ಆಗಸ್ಟ್ 1) ಶಾಲೆಗಳಿಗೆ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಇನ್ನು, ಮಲೆನಾಡಿನ ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲೂ ಮಳೆ ಬಿರುಸುಗೊಂಡಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ನದಿ ಪಾತ್ರ ಹಾಗೂ ತಗ್ಗು ಪ್ರದೇಶಗಳಿಗೆ ತೆರಳದಂತೆ ಹವಾಮಾನ ಇಲಾಖೆ ಮತ್ತು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆ:
ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



