ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ನೀರು ಬಿಡುವಂತೆ ನೀಡಿರುವ ಆದೇಶವನ್ನು ವಿರೋಧಿಸಿ ರಾಜ್ಯದಲ್ಲಿ ರೈತರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ರಾಜ್ಯಕ್ಕೆ ನಾಡಿದ್ದು ತಮಿಳುನಾಡಿನ ಸಿಎಂ ಜೋಸೆಫ್ ವಿಜಯ್ ಭೇಟಿ ನೀಡಬೇಕಿತ್ತು. ರಾಜ್ಯದಲ್ಲಿರುವ ಉದ್ವಿಗ್ನ ಪರಿಸ್ಥಿತಿಯಿಂದ ಅದೂ ಪೋಸ್ಟ್‌ಪೋನ್ ಆಗಿದೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮಾತನಾಡಿದ್ದು, ವಿಜಯ್ ಅವರಿಗೆ ಕೆಆರ್‌ಎಸ್ ಡ್ಯಾಮ್ ತೋರಿಸಿ ಎಂದು ಸಿಎಂ ಡಿ.ಕೆ. ಶಿವಕುಮಾರ್‌ಗೆ ಸವಾಲು ಹಾಕಿದ್ದಾರೆ.
ಶಿವಕುಮಾರ್ ಅವರು ಈಗಲಾದರೂ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರನ್ನು ಕರೆದುಕೊಂಡು ಬಂದು ಕೆಆರ್ ಎಸ್ ಅನ್ನು ತೋರಿಸಲಿ ಎಂದರು. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ತೊಂದರೆಯಾಗದಿರಲಿ ಎಂದು ಮನವರಿಕೆ ಮಾಡಿಕೊಡಲಿ ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಸರಿಯಾದ ಸಮಯದಲ್ಲಿ ಸುಪ್ರೀಂ ಕೋರ್ಟ್‍ಗೆ ನೀರಿನ ಕೊರತೆ ಬಗ್ಗೆ ಸೂಕ್ತವಾಗಿ ಮನವರಿಕೆ ಮಾಡಿಕೊಡಬೇಕಿತ್ತು. ಆಗ ಇಂದಿನ ಗಂಡಾಂತರದಿಂದ ತಪ್ಪಿಸಿಕೊಳ್ಳಬಹುದಿತ್ತು. ಆದರೆ ಈಗ ನೀರಿಗೆ ಹಾಹಾಕಾರ ಇದೆ. ಉಸಿರುಕಟ್ಟುವ ಸ್ಥಿತಿ ನಿರ್ಮಾಣವಾಗಿದೆ ಎಂದರು.
ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ, ಶ್ರೀರಂಗಪಟ್ಟಣದ ಕೆ.ಆರ್.ಎಸ್ ಡ್ಯಾಂ ಬಳಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯದ ಜನರ ಹಿತಕ್ಕಿಂತ ದೆಹಲಿಯಲ್ಲಿ ರಾಹುಲ್ ಗಾಂಧಿ ಮನೆ ಕಾದು ಸಚಿವ ಸಂಪುಟ ವಿಸ್ತರಣೆ ಮಾಡುವುದೇ ಮುಖ್ಯವಾಗಿದೆ ಎಂದು ಬಿ.ಎಸ್.ಯಡಿಯೂರಪ್ಪ ಅವರು ಆರೋಪಿಸಿದ್ದಾರೆ.



