ಹೊಸದಿಗಂತ ವರದಿ ಮಡಿಕೇರಿ:
ಜೀವನದಿ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಯಲ್ಲಿ ವರುಣನ ಆರ್ಭಟ ಜೋರಾಗಿದೆ.
ಕಳೆದ 24 ಗಂಟೆಗಳಲ್ಲಿ ಭಾಗಮಂಡಲ ವ್ಯಾಪ್ತಿಯಲ್ಲಿ 5.72 ಇಂಚು ಮಳೆ ದಾಖಲಾಗಿದೆ. ಗಾಳಿ ಮಳೆ ಜೋರಾಗಿದ್ದು, ಭಾಗಮಂಡಲ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿದುಕೊಂಡಿದೆ.
ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ನಾಪೋಕ್ಲುವಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮೇಲೆ ಕಾವೇರಿ ನೀರು ಹರಿಯುವ ನಿರೀಕ್ಷೆ ಇದೆ.
ಈ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಕೊಟ್ಟಮುಡಿ, ಬಲಮುರಿ, ಗುಯ್ಯ,ಕರಡಿಗೋಡು ಮತ್ತಿತರ ಕಡೆಗಳಲ್ಲಿ ಕಾವೇರಿ ನೀರಿನ ಹರಿವು ಹೆಚ್ಚಾಗುತ್ತಿದ್ದು, ಯಾವುದೇ ಸಂದರ್ಭದಲ್ಲಿ ಅಪಾಯದ ಮಟ್ಟ ತಲುಪುವ ಸಾಧ್ಯತೆ ಇದೆ.



