ಹೊಸದಿಗಂತ ವರದಿ ಬೆಳಗಾವಿ:
ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮವಾಗಿ ನದಿಗಳು ಹಾಗೂ ಜಲಾಶಯಗಳಿಗೆ ಅಪಾರ ಪ್ರಮಾಣದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಇದರ ಪರಿಣಾಮವಾಗಿ ಬೆಳಗಾವಿ ನಗರದ ಪ್ರಮುಖ ಕುಡಿಯುವ ನೀರಿನ ಮೂಲವಾಗಿರುವ ರಾಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದ ಎರಡು ಗೇಟ್ಗಳನ್ನು ತೆರೆಯುವ ಮೂಲಕ ನೀರನ್ನು ಮಾರ್ಕಂಡೇಯ ನದಿಗೆ ಬಿಡುಗಡೆ ಮಾಡಲಾಗಿದೆ.
ಜಲಾಶಯಕ್ಕೆ ಒಳಹರಿವು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೀರಿನ ಮಟ್ಟ ಸುರಕ್ಷಿತ ಮಿತಿಯಲ್ಲಿರಲು ಅಧಿಕಾರಿಗಳು ಹಂತ ಹಂತವಾಗಿ ಗೇಟ್ಗಳನ್ನು ತೆರೆಯುವ ನಿರ್ಧಾರ ಕೈಗೊಂಡಿದ್ದಾರೆ. ನೀರು ಬಿಡುಗಡೆಯಾಗುತ್ತಿರುವುದರಿಂದ ಮಾರ್ಕಂಡೇಯ ನದಿಯಲ್ಲಿ ನೀರಿನ ಹರಿವು ಗಣನೀಯವಾಗಿ ಏರಿಕೆಯಾಗಿದ್ದು, ನದಿ ತೀರದ ಗ್ರಾಮಗಳ ಜನರು ಹಾಗೂ ರೈತರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿರುವುದರಿಂದ ಜಿಲ್ಲೆಯ ಇತರ ಕೆಲವು ಸಣ್ಣ ಮತ್ತು ಮಧ್ಯಮ ಜಲಾಶಯಗಳ ಗೇಟ್ಗಳನ್ನೂ ತೆರೆಯಲಾಗಿದೆ. ಹೀಗಾಗಿ ನದಿ ಪಾತ್ರದ ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅನಗತ್ಯವಾಗಿ ನದಿಗೆ ಇಳಿಯಬಾರದು ಹಾಗೂ ಪ್ರವಾಹದ ನೀರಿನ ಸಮೀಪ ಹೋಗದಂತೆ ಆಡಳಿತ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ:
ಬೆಳಗಾವಿಯ ಜೀವನಾಡಿಯಾದ ರಾಕಸಕೊಪ್ಪ ಜಲಾಶಯ ಬೆಳಗಾವಿ ನಗರದಿಂದ ಸುಮಾರು 16 ಕಿಮಿ ದೂರದಲ್ಲಿರುವ ರಾಕಸಕೊಪ್ಪ ಜಲಾಶಯವು ಮಾರ್ಕಂಡೇಯ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಪ್ರಮುಖ ಆಣೆಕಟ್ಟಾಗಿದೆ. ಬೆಳಗಾವಿ ನಗರದ ಲಕ್ಷಾಂತರ ಜನರ ಕುಡಿಯುವ ನೀರಿನ ಅಗತ್ಯವನ್ನು ಈ ಜಲಾಶಯವೇ ಪೂರೈಸುತ್ತಿದೆ. ನಗರಕ್ಕೆ ವರ್ಷಪೂರ್ತಿ ನೀರು ಸರಬರಾಜು ಮಾಡುವ ಪ್ರಮುಖ ಮೂಲವಾಗಿರುವ ಈ ಜಲಾಶಯ ಸಂಪೂರ್ಣ ಭರ್ತಿಯಾಗಿರುವುದು ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.
ಕಳೆದ ಕೆಲವು ವರ್ಷಗಳಲ್ಲಿ ಮಳೆಯ ಕೊರತೆಯಿಂದ ಜಲಾಶಯದ ನೀರಿನ ಮಟ್ಟ ಕುಸಿದಿದ್ದ ಸಂದರ್ಭಗಳಿದ್ದರೂ, ಈ ಬಾರಿ ಉತ್ತಮ ಮಳೆಯ ಪರಿಣಾಮ ಜಲಾಶಯ ಸಂಪೂರ್ಣ ತುಂಬಿದ್ದು, ಮುಂದಿನ ದಿನಗಳಲ್ಲಿ ನಗರದ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ತೊಂದರೆ ಉಂಟಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.
ಇನ್ನೂ ಪಶ್ಚಿಮ ಘಟ್ಟಗಳಲ್ಲಿ ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗುವ ಸಾಧ್ಯತೆ ಇದ್ದು, ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ. ಅಗತ್ಯವಿದ್ದಲ್ಲಿ ಇನ್ನಷ್ಟು ಗೇಟ್ ಗಳನ್ನು ತೆರೆಯುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ಜಿಲ್ಲಾಡಳಿತ ಹಾಗೂ ನೀರಾವರಿ ಇಲಾಖೆಯ ಅಧಿಕೃತ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.



