ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ 24 ತಾಸುಗಳ ಅವಧಿಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ಹಲವು ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಡಾಜೆ ಗ್ರಾಮದಲ್ಲಿ ಪ್ರಮುಖ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಮತ್ತು ನದಿಯ ನಡುವಿನ ವ್ಯತ್ಯಾಸವೇ ಗುರುತಿಸಲಾಗದ ಸ್ಥಿತಿ ಉಂಟಾಗಿದೆ.
ಮುಂಡಾಜೆಯ ಪ್ರಮುಖ ರಸ್ತೆಗಳ ಮೇಲೆ ಮಳೆ ನೀರು ಹರಿಯುತ್ತಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸ್ಥಳೀಯರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ನಿರಂತರ ಮಳೆಯಿಂದ ತಗ್ಗು ಪ್ರದೇಶಗಳು ನೀರಿನಿಂದ ಆವೃತಗೊಂಡಿವೆ.
ಮೂಲಾರು ರಸ್ತೆ, ಕಾಯರ್ತೋಡಿ ಹಾಗೂ ಸೋಮತ್ತಡ್ಕ ಭಾಗಗಳಲ್ಲಿಯೂ ಪ್ರವಾಹದ ನೀರು ನುಗ್ಗಿ ಹಲವು ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸುತ್ತಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಬೆಳ್ತಂಗಡಿ ಪೇಟೆ ಸನಿಹದ ಸೋಮಾವತಿ ನದಿ ಉಕ್ಕಿ ಹರಿದಿದೆ.
ಇದನ್ನೂ ಓದಿ:
ಶಿಶಿಲದಲ್ಲಿ ಕಪಿಲಾ ನದಿ ತುಂಬಿ ಹರಿದ ಪರಿಣಾಮ ಶಿಶಿಲೇಶ್ವರ ದೇವಸ್ಥಾನಕ್ಕೆ ಹೋಗುವ ಸೇತುವೆ ಮುಳುಗಿದೆ. ಸೇತುವೆಯ ಕೆಳಭಾಗದಲ್ಲಿ ಸಂಗ್ರಹಗೊಂಡ ಅಪಾಪ್ರಮಾಣದ ಮರಮಟ್ಟುಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ. ಪಜಿರಡ್ಕ ಸಮೀಪದ ನೇತ್ರಾವತಿ ಹಾಗೂ ಮೃತ್ಯುಂಜಯ ನದಿಗಳು ಅಪಾಯದ ಮಟ್ಟದಲ್ಲಿ ಉಕ್ಕಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ. ನದಿಪಾತ್ರ ಹಾಗೂ ತಗ್ಗು ಪ್ರದೇಶಗಳಿಗೆ ಅನಗತ್ಯವಾಗಿ ತೆರಳದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.



