ಹೊಸದಿಗಂತ ಡಿಜಿಟಲ್:
ಕಾಸರಗೋಡು ಜಿಲ್ಲೆಯಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಪ್ರಾಕೃತಿಕ ವಿಕೋಪ ಸಂಭವಿಸದಂತೆ ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಲ್ಲೆಡೆ ವ್ಯಾಪಕ ಕಣ್ಗಾವಲು ಮುಂದುವರಿಸಿದ್ದು, ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೊಳಿಸಿದೆ.
ಜಿಲ್ಲೆಯ ಪ್ರಸಿದ್ಧ ಗಿರಿಧಾಮ ರಾಣಿಪುರಂ ಸೇರಿದಂತೆ ಎಲ್ಲಾ ಪ್ರಮುಖ ಪ್ರವಾಸಿ ತಾಣಗಳಿಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಪ್ರವೇಶವನ್ನು ಮುಂದಿನ ಆದೇಶದವರೆಗೆ ಸಂಪೂರ್ಣ ನಿಷೇಧಿಸಲಾಗಿದೆ. ಭಾರೀ ಮಳೆ ಹಾಗೂ ಭೂಕುಸಿತದ ಅಪಾಯವನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ನಿರಂತರ ಮಳೆಯಿಂದ ನದಿಗಳು, ಹೊಳೆಗಳು, ತೋಡುಗಳು ಹಾಗೂ ಜಲಪಾತಗಳಲ್ಲಿ ನೀರಿನ ಹರಿವು ಅಪಾಯಕಾರಿ ಮಟ್ಟ ತಲುಪಿರುವುದರಿಂದ ಜಲಮೂಲಗಳಿಗೆ ಇಳಿಯುವುದು, ಈಜುವುದು, ದೋಣಿ ವಿಹಾರ ನಡೆಸುವುದು ಹಾಗೂ ಸೆಲ್ಫಿ ತೆಗೆಯುವುದನ್ನು ಜಿಲ್ಲಾಡಳಿತ ನಿಷೇಧಿಸಿದೆ.
ಇದನ್ನೂ ಓದಿ:
ಭೂಕುಸಿತ ಸಂಭವಿಸುವ ಸಾಧ್ಯತೆಯಿಂದ ಜಿಲ್ಲೆಯ ಎಲ್ಲಾ ಗ್ರಾನೈಟ್ ಕ್ವಾರಿಗಳು ಹಾಗೂ ಗಣಿಗಾರಿಕೆ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಗುಡ್ಡಗಾಡು ಹಾಗೂ ಘಾಟಿ ಪ್ರದೇಶಗಳಲ್ಲಿ ರಾತ್ರಿ ವೇಳೆ ಅನಗತ್ಯ ಪ್ರಯಾಣ ಮಾಡದಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ಬಲವಾದ ಗಾಳಿ ಹಾಗೂ ಎತ್ತರದ ಅಲೆಗಳ ಮುನ್ಸೂಚನೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಸಾರ್ವಜನಿಕರು ಕಡಲತೀರಗಳಿಗೆ ಭೇಟಿ ನೀಡದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಜಿಲ್ಲಾಡಳಿತ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಿದೆ.



