ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ನಗರದ ಕೋರ್ಟ್ ರಸ್ತೆ ಪರಿಸರದಲ್ಲಿ ಶನಿವಾರ ಖಾಸಗಿ ಬಸ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಉಡುಪಿ ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಸಾವನ್ನಪ್ಪಿದ್ದಾರೆ.
ಮಧ್ಯಾಹ್ನ ಈ ಘಟನೆ ನಡೆದಿದ್ದು, ಲಕ್ಷ್ಮೀ ಅವರು ರಸ್ತೆ ದಾಟುತ್ತಿದ್ದ ಸಂದರ್ಭ ಉಡುಪಿ ಮಿಷನ್ ಕಾಂಪೌಂಡ್ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಬಸ್ ಅವರಿಗೆ ಡಿಕ್ಕಿಯಾಗಿದೆ. ಈ ಸಂದರ್ಭ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗಾಗಲೇ ಅವರು ಸಾವನ್ನಪ್ಪಿದ್ದರು. ಘಟನೆಯ ಕುರಿತಂತೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾ ಬಿಜೆಪಿಯಿಂದ ತೀವ್ರ ಸಂತಾಪ
ಲಕ್ಷ್ಮೀ ಮಂಜುನಾಥ್ ಕೊಳ ಅವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ವಿ. ಸುನಿಲ್ ಕುಮಾರ್, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಎಂಎಲ್ಸಿ ಕಿಶೋರ್ ಕುಮಾರ್ ಬೊಟ್ಯಾಡಿ ಸೇರಿದಂತೆ ಹಲವು ಪ್ರಮುಖ ನಾಯಕರು ಕೂಡಾ ಸಂತಾಪ ಸೂಚಿಸಿದ್ದಾರೆ.



