ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಸಾರ್ವಜನಿಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ತಂದಿರುವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.
ಇದರೊಂದಿಗೆ ಹೊಸ ಕಾನೂನು ಜಾರಿಗೆ ಬಂದಿದ್ದು, ಪರೀಕ್ಷಾ ಅಕ್ರಮಗಳಲ್ಲಿ ತೊಡಗುವವರ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೊಸ ನಿಯಮಗಳ ಪ್ರಕಾರ, ತನಿಖೆ ಹಾಗೂ ನ್ಯಾಯಾಂಗ ಪ್ರಕ್ರಿಯೆಗೆ ನಿಗದಿತ ಕಾಲಮಿತಿ ನಿಗದಿಯಾಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕುವ ಗುರಿ ಹೊಂದಲಾಗಿದೆ.
ಕಠಿಣ ಶಿಕ್ಷೆ, ತ್ವರಿತ ತನಿಖೆ
ಹೊಸ ಕಾನೂನಿನಡಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ 5ರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಗರಿಷ್ಠ 10 ಕೋಟಿ ದಂಡ ವಿಧಿಸಲು ಅವಕಾಶವಿದೆ. ತನಿಖೆಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸಿ, ತ್ವರಿತ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಸಿ ಮೂರು ತಿಂಗಳೊಳಗೆ ತೀರ್ಪು ನೀಡುವ ವ್ಯವಸ್ಥೆ ಮಾಡಲಾಗಿದೆ.
ಪಾರದರ್ಶಕ ಪರೀಕ್ಷೆಗೆ ಹೊಸ ಕ್ರಮ
ಪ್ರತಿ ರಾಜ್ಯದಲ್ಲಿ ವಿಶೇಷ ತ್ವರಿತ ನ್ಯಾಯಾಲಯಗಳು ಹಾಗೂ ತನಿಖೆಗೆ ವಿಶೇಷ ಕಾರ್ಯಪಡೆ ರಚಿಸಲಾಗುತ್ತದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಮತ್ತು ನ್ಯಾಯಸಮ್ಮತತೆಯನ್ನು ಬಲಪಡಿಸುವುದೇ ಈ ಕಾನೂನಿನ ಪ್ರಮುಖ ಉದ್ದೇಶವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.



